ಹಾಸನ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಹಳ ಸೂಕ್ಷ್ಮವಾದುದು. ಅಧಿಕಾರಿಗಳು ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವಿಶೇಷ ಸಮಗ್ರ ಪರಿಷ್ಕರಣೆ ಜಿಲ್ಲಾ ವೀಕ್ಷಕ ನವೀನ್ ರಾಜ್ ಸಿಂಗ್, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟರು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಶೇ 97 ರಷ್ಟು ಮ್ಯಾಪಿಂಗ್ ಆಗಿದೆ. ಉಳಿದ ಶೇ 3ರ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ಪ್ರತಿ ವಾರ್ಡ್‌ನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಮೂಲಸೌಕರ್ಯ ಒದಗಿಸುವಂತೆ ಸೂಚನೆ ನೀಡಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರನ್ನು ಕೈಬಿಡಬಾರದು. ಅನರ್ಹರು ಪಟ್ಟಿಯಲ್ಲಿ ಸೇರ್ಪಡೆ ಆಗದಂತೆ ಎಚ್ಚರವಹಿಸಬೇಕು. ಮತಗಟ್ಟೆ ಅಧಿಕಾರಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದವರನ್ನು ಸನ್ಮಾನಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಮರ್ಪಕವಾಗಿ ನಡೆಯುತ್ತಿದೆ. ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ, ಮೇಲ್ವಿಚಾರಕರಿಗೆ, ಏಜೆಂಟರಿಗೆ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಮತಗಟ್ಟೆ ಅಧಿಕಾರಿಗಳು ಜೂನ್ 30ರಿಂದ ಮನೆ ಮನೆಗೆ ಭೇಟಿ ನೀಡಿ ಎನುಮೆರೇಷನ್ ಫಾರಂಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯಿತಿ ಸಿಇಒ ಶುಭಂ ಶುಕ್ಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ಹುಲುಮನಿ ತಿಮ್ಮಣ್ಣ ಹಾಜರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-36-2146861080

