Dailyhunt Logo
  • Light mode
    Follow system
    Dark mode
    • Play Story
    • App Story
ಎನ್‌ಆರ್‌ಐ ಸಚಿವಾಲಯ ಸ್ಥಾಪನೆಯ ಸಾಧಕ-ಬಾಧಕ: ಜಿ. ಪರಮೇಶ್ವರ ನೇತೃತ್ವದಲ್ಲಿ ಸಮಿತಿ

ಎನ್‌ಆರ್‌ಐ ಸಚಿವಾಲಯ ಸ್ಥಾಪನೆಯ ಸಾಧಕ-ಬಾಧಕ: ಜಿ. ಪರಮೇಶ್ವರ ನೇತೃತ್ವದಲ್ಲಿ ಸಮಿತಿ

ಬೆಂಗಳೂರು: ರಾಜ್ಯದಲ್ಲಿ ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಹೊಸದಾಗಿ ಸಚಿವಾಲಯ ರಚಿಸುವ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ.

ಗುರುವಾರ (ಜುಲೈ 2) ನಡೆದ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ 'ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ' ಸ್ಥಾಪಿಸುವ ಪ್ರಸ್ತಾವ ಮಂಡಿಸಲಾಗಿತ್ತು.

ಹೊಸದಾಗಿ ಸಚಿವಾಲಯ ರಚಿಸುವ ಕುರಿತು ವಿಷಯದಲ್ಲಿ ವಿಸ್ತೃತ ಚರ್ಚೆ ನಡೆಯಿತು. ಬಳಿಕ ಉಪಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ನಾಲ್ಕೈದು ಸಚಿವರ ಸಮಿತಿ ರಚಿಸಿ ಅಭಿಪ್ರಾಯ ಪಡೆಯಲು ನಿರ್ಣಯ ತೆಗೆದುಕೊಳ್ಳಲಾಯಿತು. ಮುಂದಿನ ಸಚಿವ ಸಂಪುಟ ಸಭೆಗೂ ಮುನ್ನ ಈ ಸಮಿತಿಯು ವರದಿ ಸಲ್ಲಿಸಬೇಕು. ಆ ವರದಿಯಲ್ಲಿರುವ ಶಿಫಾರಸ್ಸುಗಳನ್ನು ಪರಿಗಣಿಸಿ ಹೊಸ ಇಲಾಖೆ ಸ್ಥಾಪಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ನಿರ್ಧರಿಸಲಾಯಿತು.

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಅಗತ್ಯ ಬಗ್ಗೆ ಸಚಿವರು ಸುದೀರ್ಘ ಚರ್ಚೆ ನಡೆಸಿದರು. ಇಲಾಖೆಯ ಅಗತ್ಯತೆ, ಕಾರ್ಯವ್ಯಾಪ್ತಿ ‌ ಬಗ್ಗೆ ಪರಿಶೀಲನೆ ಅಗತ್ಯ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

ವಿದೇಶದಲ್ಲಿರುವ ಕನ್ನಡಿಗರು ಹಾಗೂ ಜಾಗತಿಕ ಹೂಡಿಕೆದಾರರೊಂದಿಗೆ ಸಮನ್ವಯ ಸಾಧಿಸಲು ಪ್ರತ್ಯೇಕ ಇಲಾಖೆ ಸ್ಥಾಪಿಸುವ ಉದ್ದೇಶ ಸರ್ಕಾರ ಹೊಂದಿದೆ. ಆದರೆ, ಈ ಇಲಾಖೆಯ ಹಲವು ಕಾರ್ಯಗಳು ಕೈಗಾರಿಕೆ, ಐಟಿ-ಬಿಟಿ ಹಾಗೂ ಇತರ ಇಲಾಖೆಗಳ ವ್ಯಾಪ್ತಿಯಲ್ಲಿರುವುದರಿಂದ ಅದರ ಕಾರ್ಯವ್ಯಾಪ್ತಿಯನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು.

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ: ಡಿ.ಕೆ. ಶಿವಕುಮಾರ್
Dailyhunt
Disclaimer: This content has not been generated, created or edited by Dailyhunt. Publisher: Prajavani