Dailyhunt Logo
  • Light mode
    Follow system
    Dark mode
    • Play Story
    • App Story
ಗ್ಯಾರಂಟಿ ಯೋಜನೆಗಳು ಅರ್ಹರಿಗಷ್ಟೇ ತಲುಪಲಿ: ಎಚ್.ಎಂ.ರೇವಣ್ಣ

ಗ್ಯಾರಂಟಿ ಯೋಜನೆಗಳು ಅರ್ಹರಿಗಷ್ಟೇ ತಲುಪಲಿ: ಎಚ್.ಎಂ.ರೇವಣ್ಣ

ಬೀದರ್: 'ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದಿದ್ದು, ಅವುಗಳ ಸೌಲಭ್ಯ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು' ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ₹114 ಕೋಟಿಗೂ ಅಧಿಕ ಮೊತ್ತ ಜಮೆಯಾಗಿರುವುದು ಪತ್ತೆಯಾಗಿದ್ದು, ಈಗಾಗಲೇ ಅಂತಹ ಖಾತೆಗಳನ್ನು ಗುರುತಿಸಿ ₹14 ಕೋಟಿ ವಾಪಸ್ ಪಡೆಯಲಾಗಿದೆ. ಜಿಲ್ಲೆಯಲ್ಲಿ ಸಹ ಯೋಜನೆಗಳ ಪರಿಷ್ಕರಣೆ ಕಾರ್ಯವನ್ನು ಚುರುಕುಗೊಳಿಸಿ ಅನರ್ಹರನ್ನು ಗುರುತಿಸಬೇಕು' ಎಂದು ಅಧಿಕಾರಿಗಳಿಗೆ ಸೂಚಿಸಿದರು.

'ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 5,331 ದೂರುಗಳು ದಾಖಲಾಗಿದ್ದು, ಪರಿಶೀಲನೆಯ ಬಳಿಕ 4,943 ಅನರ್ಹ ಫಲಾನುಭವಿಗಳನ್ನು ಸೇವಾ ಸಿಂಧು ಪೋರ್ಟಲ್‌ನಿಂದ ತೆಗೆದುಹಾಕಲಾಗಿದೆ. ಅನರ್ಹರ ಖಾತೆಗಳಿಗೆ ಜಮೆಯಾಗಿರುವ ₹12 ಕೋಟಿ ಮೊತ್ತದಲ್ಲಿ ₹11 ಲಕ್ಷವನ್ನು ಈಗಾಗಲೇ ವಾಪಸ್ ಪಡೆಯಲಾಗಿದೆ. ಉಳಿದ ಮೊತ್ತವನ್ನು ವಸೂಲಿ ಮಾಡಲು ಬ್ಯಾಂಕ್‌ಗಳೊಂದಿಗೆ ಸಮನ್ವಯ ಸಾಧಿಸಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

'ಗೃಹಜ್ಯೋತಿ ಯೋಜನೆಯಡಿ ಕೆಲವೆಡೆ ಗೃಹ ಬಳಕೆಯ ಹೆಸರಿನಲ್ಲಿ ವಾಣಿಜ್ಯ ಬಳಕೆ ನಡೆಯುತ್ತಿರುವುದು ಕಂಡುಬಂದಿದ್ದು, ಅಂತಹ ಪ್ರಕರಣಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯಲ್ಲಿ ಒಂದೇ ಕುಟುಂಬದ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳು ಇರುವ ಕುರಿತು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಬೇಕು' ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಮೃತರಾವ ಚಿಮ್ಮಕೊಡೆ ಮಾತನಾಡಿ, 'ಜಿಲ್ಲೆಯಲ್ಲಿ ಹೊಸದಾಗಿ ಮೂರು ತಾಲ್ಲೂಕುಗಳು ರಚನೆಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ 70 ಬಸ್‌ಗಳನ್ನು ಮಂಜೂರು ಮಾಡಬೇಕು' ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, 'ಅಗತ್ಯತೆ ಪರಿಗಣಿಸಿ ಜಿಲ್ಲೆಗೆ ಬಸ್‌ಗಳನ್ನು ಹಂಚಿಕೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ ಮಾತನಾಡಿ, ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಲ್ಲಿದ್ದು, ಅರ್ಹ ಫಲಾನುಭವಿಗಳ ಗುರುತಿಸುವಿಕೆ ಮತ್ತು ಪರಿಷ್ಕರಣೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260623-33-1210394065

Dailyhunt
Disclaimer: This content has not been generated, created or edited by Dailyhunt. Publisher: Prajavani