ಹಾಸನ: ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಒಂಟಿಸಲಗ ಸಂಚರಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಗ್ರಾಮದೊಳಗೆ ಘೀಳಿಡುತ್ತಾ ಬಂದ ಕಾಡಾನೆ, ಮನೆಗಳ ಸಮೀಪದಲ್ಲೇ ಸಂಚರಿಸಿದ್ದು, ಸ್ಥಳೀಯರು ಭಯಭೀತರಾಗಿದ್ದರು. ಶಾಲೆಯ ಮುಂಭಾಗದಿಂದಲೇ ಹಾದು ಹೋದ ಆನೆಯನ್ನು ಕಂಡು ಗ್ರಾಮಸ್ಥರು ಮನೆಗಳಿಂದ ಹೊರಬರಲು ಹೆದರಿದರು.
ಒಂಟಿಸಲಗ ಗ್ರಾಮದಲ್ಲಿ ಸಂಚರಿಸುವ ವೇಳೆ ಅದರ ಹಿಂದೆ ನಾಯಿಗಳು ಬೊಗಳುತ್ತಾ ಓಡಿದ ದೃಶ್ಯ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಾಡಾನೆ ಗ್ರಾಮದ ವಿವಿಧ ಭಾಗಗಳಲ್ಲಿ ಕೆಲಕಾಲ ಅಲೆದಾಡಿದ ಬಳಿಕ ಸಮೀಪದ ಕಾಫಿ ತೋಟದಲ್ಲಿ ಆಶ್ರಯ ಪಡೆದಿದೆ ಎಂದು ತಿಳಿದುಬಂದಿದೆ.
ಗ್ರಾಮಸ್ಥರು ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕಾಡಾನೆಯನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟುವ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದಾರೆ.
ಗ್ರಾಮದ ಸುತ್ತಮುತ್ತ ಎಚ್ಚರಿಕೆಯಿಂದ ಇರಲು ಅರಣ್ಯ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದು, ಕಾಡಾನೆಯ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-36-1942579187

