Dailyhunt Logo
  • Light mode
    Follow system
    Dark mode
    • Play Story
    • App Story
'ಕರಾವಳಿ' ಚಿತ್ರದ ವಿವಾದ: ಅಸಲಿ ವಿಚಾರ ಬಿಚ್ಚಿಟ್ಟ ನಟ ಪ್ರಜ್ವಲ್ ದೇವರಾಜ್

'ಕರಾವಳಿ' ಚಿತ್ರದ ವಿವಾದ: ಅಸಲಿ ವಿಚಾರ ಬಿಚ್ಚಿಟ್ಟ ನಟ ಪ್ರಜ್ವಲ್ ದೇವರಾಜ್

'ಕರಾವಳಿ' ಸಿನಿಮಾದ ಡಬ್ಬಿಂಗ್ ಹಾಗೂ ಸಂಭಾವನೆ ವಿವಾದದ ಕುರಿತು ಖುದ್ದು ನಟ ಪ್ರಜ್ವಲ್ ದೇವರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡ ಪ್ರಜ್ವಲ್‌ ದೇವರಾಜ್‌, 'ದಯವಿಟ್ಟು ಜುಲೈ 24ರಂದು ಚಿತ್ರಮಂದಿರಗಳಲ್ಲಿ 'ಕರಾವಳಿ' ಚಿತ್ರವನ್ನು ವೀಕ್ಷಿಸಿ' ಎಂದು ಹೇಳಿದ್ದಾರೆ.

ನಿನ್ನೆ (ಜುಲೈ.10) ಪ್ರಜ್ವಲ್‌ ದೇವರಾಜ್‌ ವಿರುದ್ಧ ನಿರ್ದೇಶಕ ಗುರುದತ್ ಅವರು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ನಿರ್ಮಾಣ ಸಂಸ್ಥೆ 'ಗುರುದತ್ತ ಗಾಣಿಗ ಫಿಲ್ಮ್ಸ್' ಅಧಿಕೃತ ಪ್ರಕಟಣೆ ಹೊರಡಿಸಿತ್ತು. ಆ ಬೆನ್ನಲ್ಲೇ ನಟ ಪ್ರಜ್ವಲ್‌ ದೇವರಾಜ್‌ ಅಸಲಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

ಪ್ರಜ್ವಲ್ ದೇವರಾಜ್‌ರಿಂದ ಡಬ್ಬಿಂಗ್ ಮಾಡಿಸಲಿಲ್ಲವೇಕೆ: ಕಾರಣ ಬಿಚ್ಚಿಟ್ಟ ಸಂಸ್ಥೆಯಾವುದೇ ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿ: ಪ್ರಜ್ವಲ್ ದೇವರಾಜ್ ಪರ ನಿಂತ ಮೇಘನಾ ರಾಜ್

ಪ್ರಜ್ವಲ್‌ ದೇವರಾಜ್‌ ಅವರ ಅಧಿಕೃತ ಹೇಳಿಕೆಯಲ್ಲಿ ಏನಿದೆ?

'ಇತ್ತೀಚಿನ ದಿನಗಳಲ್ಲಿ ಕರಾವಳಿ ಚಿತ್ರದ ನಿರ್ಮಾಣ ಸಂಸ್ಥೆ ಗುರುದತ್ ಗಾಣಿಗೆ ಫಿಲ್ಮ್ಸ್ ಹಾಗೂ ನಿರ್ದೇಶಕ ಗುರುದನ್ ಗಾಣಿಗೆ ಅವರಿಂದ ಸಾರ್ವಜನಿಕವಾಗಿ ನೀಡಲಾಗುತ್ತಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ನನ್ನ ಅಭಿಮಾನಿಗಳು ಮಾಧ್ಯಮ ಮಿತ್ರರು ಹಾಗೂ ಕನ್ನಡ ಚಿತ್ರರಂಗದ ಬಂಧುಗಳ ಮುಂದೆ ಕೆಲವು ವಾಸ್ತವಾಂಶಗಳನ್ನು ಸ್ಪಷ್ಟಪಡಿಸುವುದು ಅಗತ್ಯವೆಂದು ನಾನು ಭಾವಿಸುತ್ತೇನೆ' ಎಂದಿದ್ದಾರೆ

'ಕರಾವಳಿ' ಚಿತ್ರದ ಟ್ರೇಲರ್ ಬಿಡುಗಡೆಯಾದ ಸಂದರ್ಭದಲ್ಲಿ, ನನ್ನಿಂದ ಯಾವುದೇ ಮಾಹಿತಿ, ಅನುಮತಿ ಅಥವಾ ಒಪ್ಪಿಗೆಯಿಲ್ಲದೆ ನನ್ನ ಪಾತ್ರದ ಧ್ವನಿಗೆ, ಮತ್ತೊಬ್ಬರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರ ನನಗೆ ತಿಳಿಯಿತು. ಅದೇ ಸಮಯದಲ್ಲಿ, ನನಗೆ ಒಪ್ಪಿಗೆಯಾದ ಸಂಭಾವನೆಯೂ ಸಂಪೂರ್ಣವಾಗಿ ಪಾವತಿಯಾಗಿರಲಿಲ್ಲ. ಈ ಎರಡೂ ಕಾರಣಗಳಿಂದಲೇ ನಾನು ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ' ಎಂದರು.

'ನಂತರ ಗುರುದತ್ ಗಾಣಿಗೆ ಫಿಲ್ಮ್ಸ್ ಹಾಗೂ ನಿರ್ದೇಶಕ ಗುರುದತ್ ಗಾಣಿಗ ಅವರು ಈ ವಿವಾದಕ್ಕೆ ನನ್ನ ಸಿಕ್ಸ್ ಪ್ಯಾಕ್ ಲುಕ್ ಕಾರಣ ಎಂಬ ರೀತಿಯಲ್ಲಿ ಸಾರ್ವಜನಿಕವಾಗಿ ನೀಡಿರುವ ಹೇಳಿಕೆಗಳು ನನ್ನ ಗಮನಕ್ಕೆ ಬಂದಿವೆ. ಆ ಕುರಿತು ನಾನು ಸ್ಪಷ್ಟಪಡಿಸಲು ಬಯಸುವುದು ಏನೆಂದರೆ, ಈ ವಿಷಯಕ್ಕೆ ಹಾಗೂ ಸಿಕ್ಸ್ ಪ್ಯಾಕ್‌ ಮಾಡದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಯಾವುದೇ ಅನುಮತಿಯಿಲ್ಲದೆ ನನ್ನ ಪಾತ್ರಕ್ಕೆ ಮತ್ತೊಬ್ಬರಿಂದ ಡಬ್ಬಿಂಗ್ ಮಾಡಿರುವುದು ಹಾಗೂ ಆ ಸಂದರ್ಭದಲ್ಲಿ ನನ್ನ ಸಂಭಾವನೆ ಸಂಪೂರ್ಣವಾಗಿ ಪಾವತಿಯಾಗಿರದಿರುವುದೇ ವಿಷಯದ ಮೂಲ ಕಾರಣಗಳಾಗಿವೆ. ಮೊದಲ ದಿನದಿಂದಲೂ ನನ್ನ ನಿಲುವು ಒಂದೇ ಆಗಿತ್ತು. ನನಗೆ ಬಾಕಿ ಇದ್ದ ಸಂಭಾವನೆಯನ್ನು ಸಂಪೂರ್ಣವಾಗಿ ಪಾವತಿಸಿದ ತಕ್ಷಣ ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಲು ಹಾಗೂ ಚಿತ್ರದ ಪ್ರಚಾರದಲ್ಲಿ ಸಂಪೂರ್ಣವಾಗಿ ಭಾಗವಹಿಸಲು ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದ್ದೆ' ಎಂದು ಹೇಳಿದ್ದಾರೆ.

'ಟ್ರೇಲರ್ ಬಿಡುಗಡೆಯಾದ ಮರುದಿನ ಜಿಎಸ್‌ಟಿ ಮೊತ್ತವನ್ನು ಹೊರತುಪಡಿಸಿ ನನ್ನ ಬಾಕಿ ಸಂಭಾವನೆಯನ್ನು ಪಾವತಿಸಲಾಯಿತು. ಅದರ ನಂತರ ಗುರುದತ್ ಗಾಣಿಗೆ ಫಿಲ್ಮ್ಸ್‌ ವತಿಯಿಂದ ನನ್ನ ವ್ಯವಸ್ಥಾಪಕರಿಗೆ ಡಬ್ಬಿಂಗ್ ಸೇವೆ ಹಾಗೂ ಚಿತ್ರದ ಪ್ರಚಾರದಲ್ಲಿ ನನ್ನ ಭಾಗವಹಿಸುವಿಕೆ ಇನ್ನು ಮುಂದೆ ಆಗತ್ಯವಿಲ್ಲ ಎಂದು ತಿಳಿಸಲಾಯಿತು. ಹೀಗಾಗಿ ಚಿತ್ರದ ಡಬ್ಬಿಂಗ್ ಹಾಗೂ ಪ್ರಚಾರದಲ್ಲಿ ನಾನು ಭಾಗವಹಿಸದಿರುವುದು ನನ್ನ ನಿರ್ಧಾರವಲ್ಲ ಎಂಬುದನ್ನು ಸ್ಪಷ್ಟವಡಿಸಲು ಬಯಸುತ್ತೇನೆ' ಎಂದಿದ್ದಾರೆ.

'ಇದರ ಜೊತೆಗೆ, ನನ್ನ ಧ್ವನಿ ಈ ಪಾತ್ರಕ್ಕೆ ಸೂಕ್ತವಲ್ಲ ಎಂಬ ರೀತಿಯ ಸಾರ್ವಜನಿಕ ಹೇಳಿಕೆಗಳೂ ನನ್ನ ಗಮನಕ್ಕೆ ಬಂದಿವೆ. ಆದರೆ, ನನ್ನ ಪಾತ್ರಕ್ಕೆ ಡಬ್ಬಿಂಗ್ ಮಾಡುವ ಅವಕಾಶವನ್ನು ನನಗೆ ನೀಡದೇ, ಅಂತಹ ಅಭಿಪ್ರಾಯವನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿರುವುದು ನನಗೆ ನೋವುಂಟು ಮಾಡಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ನನ್ನ ಬೆಳವಣಿಗೆಗಳು ನನಗೆ ವೈಯಕ್ತಿಕವಾಗಿಯೂ ಹಾಗೂ ಪ್ರತಿಪರವಾಗಿಯೂ ಬೇಸರವನ್ನುಂಟು ಮಾಡಿದೆ' ಎಂದರು.

'ಈ ಹೇಳಿಕೆಯ ಮೂಲಕ ನನ್ನ ನಿಲುವನ್ನು ಸಾರ್ವಜನಿಕರ ಮುಂದೆ ಸ್ಪಷ್ಟಪಡಿಸುವ ಉದ್ದೇಶ ಮಾತ್ರ ನನ್ನದು, ಈ ವಿಚಾರಕ್ಕೆ, ಸಂಬಂಧಿಸಿದಂತೆ ನನ್ನಿಂದ ಸಾರ್ವಜನಿಕವಾಗಿ ನಡೆಯುವ ಯಾವುದೇ ಚರ್ಚೆ ಪ್ರತಿಕ್ರಿಯೆ ಅಥವಾ ವಾಗ್ವಾದಕ್ಕೆ ಇಲ್ಲಿಯೇ ಪೂರ್ಣ ವಿರಾಮ ಹಾಕುತ್ತಿದ್ದೇನೆ. ಇನ್ನು ಮುಂದೆ ಈ ವಿಷಯದ ಕುರಿತು ನಾನು ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡುವುದಿಲ್ಲ. ಒಬ್ಬ ಕಲಾವಿದನಾಗಿ ನನ್ನ ಮೊದಲ ಆದ್ಯತೆ ಯಾವಾಗಲೂ ಕನ್ನಡ ಸಿನಿಮಾ, ವೈಯಕ್ತಿಕ ಭಿನ್ನಾಭಿಪ್ರಾಯಗಳು ಇಡೀ ಚಿತ್ರತಂಡದ ಪರಿಶ್ರಮವನ್ನು ಮರೆಮಾಚಬಾರದು ಎಂಬುದು ನನ್ನ ದೃಢ ನಂಬಿಕೆ. ಆದ್ದರಿಂದ ಕರಾವಳಿ ಚಿತ್ರದ ಸಂಪೂರ್ಣ ತಂಡಕ್ಕೆ ಶುಭಹಾರೈಕೆಗಳನ್ನು ತಿಳಿಸುತ್ತೇನೆ. ನನ್ನ ಅಭಿಮಾನಿಗಳು ಹಾಗೂ ಕನ್ನಡ ಸಿನಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ತೆರಳಿ ವೀಕ್ಷಿಸಿ, ಈ ಚಿತ್ರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬ ಕಲಾವಿದ, ತಂತ್ರಜ್ಞ ಹಾಗೂ ಸಿಬ್ಬಂದಿಯನ್ನು ಪ್ರೋತ್ಸಾಹಿಸುವಂತೆ ವಿನಂತಿಸುತ್ತೇನೆ' ಎಂದಿದ್ದಾರೆ.

'ಈ ಕಷ್ಟದ ಸಮಯದಲ್ಲೂ ನನ್ನೊಂದಿಗೆ ನಿಂತು ಪ್ರೀತಿ, ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದ ನನ್ನ ಅಭಿಮಾನಿಗಳು, ಮಾಧ್ಯಮ ಮಿತ್ರರು ಹಾಗೂ ಕನ್ನಡ ಚಿತ್ರರಂಗದ ಬಂದುಗಳಿಗೆ ನನ್ನ ಹೃದಯಪೂರ್ವಕ ಕೃಜ್ಞತೆಗಳು, ನಿಮ್ಮ ಪ್ರೀತಿ ಮತ್ತು ಆಶೀರ್ವಾದವೇ ನನ್ನ ದೊಡ್ಡ ಶಕ್ತಿ' ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani