ಕೊಳ್ಳೇಗಾಲ: ಬಡವರ, ದೀನ-ದಲಿತರ ಹಾಗೂ ಹಿಂದುಳಿದ ವರ್ಗದ ಪರವಾಗಿ ನಿಂತಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಸೆ.30ರಂದು ನಡೆಯುವ ವಿವಿಧ ಕಾಮಗಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ.
ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಜನಪರವಾಗಿ ಅನೇಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಪಕ್ಷವಾಗಿದೆ. ಆದರೆ ವಿರೋಧ ಪಕ್ಷದವರು ನಮ್ಮ ಪಕ್ಷದವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಪ್ರತಿನಿತ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ನೀಡಿ ರುವುದರಿಂದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ಈಗ ಬರೀ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಹೇಳುವುದೇ ವಿರೋಧ ಪಕ್ಷದವರ ಕೆಲಸವಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲವನ್ನು ಮನ್ನಾ ಮಾಡಿದ್ದರು. ಈಗ ನರೇಂದ್ರ ಮೋದಿ ದೇಶದ ರೈತರ ಸಾಲ ಮನ್ನಾ ಮಾಡಲಿ ಗೊತ್ತಾಗುತ್ತದೆ ಎಂದರು.
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇತ್ತೀಚೆಗೆ ರೈತರ ಬಗ್ಗೆ ಅಪಾರವಾದ ಪ್ರೀತಿ ಕಾಳಜಿಯನ್ನು ತೋರಿಸುತ್ತಿದ್ದಾರೆ. ನಿಮಗೆ ನಿಜವಾದ ಕಾಳಜಿ ಇದ್ದರೆ ನಿಮ್ಮ ಪ್ರಧಾನಿಯವರಿಗೆ ಹೇಳಿ ಸಾಲಮನ್ನಾ ಮಾಡಿಸಿ. ನಿಜ ಹೇಳಬೇಕಾದರೆ ಕುಮಾರಸ್ವಾಮಿ ಅವರಿಗೆ ಮೋದಿ ಮುಂದೆ ನಿಂತು ಮಾತನಾಡುವುದಕ್ಕೆ ತಾಖತ್ ಇಲ್ಲ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಹಾಗಾಗಿ 2028ಕ್ಕೂ ಸಹ ಅಧಿಕಾರ ಹಿಡಿಯುವುದರಲ್ಲಿ ಅನುಮಾನವೇ ಇಲ್ಲ. ಪಕ್ಷಕ್ಕೆ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯಬೇಕು. ಮುಖ್ಯಮಂತ್ರಿಗಳು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ₹411 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡುವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕು ಎಂದರು.
ಮಾಜಿ ಶಾಸಕ ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ಕೊಳ್ಳೇಗಾಲ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಯಳಂದೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಭುಪ್ರಸಾದ್, ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಯೋಗೇಂದ್ರ, ಲೋಕೇಶ್ ನಂಜುಂಡಸ್ವಾಮಿ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
₹48 ಕೋಟಿ ವೆಚ್ಚದಲ್ಲಿ ಆಸ್ಪತ್ರೆ
ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಬರುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ಸೆ.30ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ 10 ಕ್ಕೂ ಸಚಿವರು ಆಗಮಿಸಿ ಕ್ಷೇತ್ರದ ಮುಡಿಗುಂಡದಲ್ಲಿ ₹48 ಕೋಟಿ ವೆಚ್ಚದಲ್ಲಿ 250 ಹಾಸಿಗೆಯುಳ್ಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವರು, ₹15 ಕೋಟಿ ವೆಚ್ಚದಲ್ಲಿ ಮುಡಿಗುಂಡ ನೂತನ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಯಳಂದೂರಿನಲ್ಲಿ ₹35 ಕೊಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆ ಉದ್ಘಾಟನೆ ಹಾಗೂ 20 ವರ್ಷಗಳಿಂದ ಪೂರ್ಣಗೊಳ್ಳದೇ ನನೆಗುದ್ದಿಗೆ ಬಿದ್ದಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭವನ ಸ್ಮಾರಕ ಭವನ ಉದ್ಘಾಟನೆ ಸೇರಿದಂತೆ 20 ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮ ನಡೆಯುತ್ತದೆ. ನಾಗರಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
260928-37-1911923985

