ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಕಾನ್‌ಸ್ಟೆಬಲ್ 2,314 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ 20ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲ ಕೇಂದ್ರಗಳಲ್ಲೂ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
'ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ 333 ಕೇಂದ್ರಗಳಲ್ಲಿ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ 85 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮಿಕ್ಕುಳಿದ ವೃಂದದವರಿಗೆ ಪರೀಕ್ಷೆ ಆರಂಭವಾದರೆ, ಕಲ್ಯಾಣ ಕರ್ನಾಟಕ ವೃಂದದವರಿಗೆ ಮಧ್ಯಾಹ್ನ 3ರಿಂದ ಆರಂಭವಾಗಲಿದೆ' ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
'ಮಿಕ್ಕುಳಿದ ವೃಂದದಲ್ಲಿ 1,42,912 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 38,332 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ' ಎಂದು ಹೇಳಿದ್ದಾರೆ.

