ಮಂಗಳೂರು: ಶಾಲಾ-ಕಾಲೇಜು, ಪಂಚಾಯಿತಿ, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಷ್ ಸಮಿತಿ ರಚಿಸಲು ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದರು.
ಶನಿವಾರ ಇಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಯಲ್ಲಿ ಅವರು ಮಾತನಾಡಿದರು.
ಮಾದಕ ಮತ್ತು ವ್ಯಸನ ನಿಷೇಧ ಯೋಜನೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಅಂಗವಿಕಲ ಕುಂದುಕೊರತೆ ನಿವಾರಣೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಣೆ ತಡೆ ಸಮಿತಿ, ಬಾಲ್ಯ ವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿ, ಬೇಟಿ ಬಚಾವೋ ಬೇಟಿ ಪಡಾವೋ ಸಮಿತಿ, ಮಾತ್ರವಂದನ ಯೋಜನೆ ಸಮಿತಿಗಳ ಪ್ರಗತಿ ಪರಿಶೀಲಿಸಿದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 3 ತಿಂಗಳಲ್ಲಿ 4 ಪ್ರಕರಣ ದಾಖಲಾಗಿದ್ದು, 3 ಪ್ರಕರಣ ಸಮಾಲೋಚನಾ ಹಂತದಲ್ಲಿವೆ. ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ ಹಾಗೂ ಸ್ತ್ರೀಶಕ್ತಿ ಸಭೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಮಾಹಿತಿ ನೀಡಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-29-144370470

