ಹಾಸನ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೇಂದ್ರ ಸರ್ಕಾರವೇ ಹೊಣೆ. ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಮಂಜುನಾಥ್ ಶರ್ಮಾ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿ 22.7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿದ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಗೊಂದಲಕ್ಕೆ ಸಿಲುಕಿತು ಎಂದು ದೂರಿದರು.
ವಿವಿಧ ರಾಜ್ಯಗಳಲ್ಲಿ ತನಿಖೆ ನಡೆಯುತ್ತಿದ್ದು, ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಕಠಿಣ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ವಿಫಲವಾಗಿದೆ. ಪರೀಕ್ಷೆ ಮುಂದೂಡಿಕೆ, ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡ ವರದಿಗಳಿವೆ. ಆದರೆ ಕೇಂದ್ರದಿಂದ ಸೂಕ್ತ ಸ್ಪಂದನೆ, ಸಾಂತ್ವನ ದೊರೆತಿಲ್ಲ ಎಂದು ಟೀಕಿಸಿದರು.
ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ ಇದ್ದರೂ ಅಕ್ರಮ ತಡೆಯಲು ಸಾಧ್ಯವಾಗಿಲ್ಲ. ಇದರಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಾರ್ಯವೈಖರಿ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಹೀಗಾಗಿ ಸಮಗ್ರ, ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಕೆ.ಎ ಸಲೀಂ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ದುರುಪಯೋಗ ಪಡಿಸಿಕೊಂಡು ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಮದುವೆಯಾಗಿ ಬೇರೆ ಊರಿಗೆ ತೆರಳಿರುವ ಮಹಿಳೆಯರು, ಅನಾಥರು, ದಾಖಲೆ ಕೊರತೆಯಿರುವ ಬಡವರು ಈ ಪ್ರಕ್ರಿಯೆಯಿಂದ ತೊಂದರೆಗೆ ಒಳಗಾಗುತ್ತಾರೆ. ಕೇವಲ 30 ದಿನಗಳಲ್ಲಿ ಇಷ್ಟೊಂದು ದೊಡ್ಡ ಪರಿಶೀಲನೆ ನಡೆಸುವುದು ಅನುಮಾನಾಸ್ಪದ. ಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ಸರ್ಕಾರಿ ಸೌಲಭ್ಯಗಳಿಂದ ವಂಚಿಸುವ ಹೇಳಿಕೆಗಳು ಕೆಲ ರಾಜ್ಯಗಳಲ್ಲಿ ಕೇಳಿಬಂದಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-36-889629997

