ಬಾಗಲಕೋಟೆ: ನೌಕರರಿಗೂ ವೇತನ ನೀಡುವುದಕ್ಕೂ ಹಣ ಇಲ್ಲದಂತಹ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಹಣಕಾಸಿನ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಸೋಮವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ಮಾಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ವೇತನ ನೀಡುವುದು ತಡವಾಗುತ್ತಿದೆ.
ಶಿವಮೊಗ್ಗದ ಕುವೆಂಪು ವಿವಿ ಅತಿಥಿ ಉಪನ್ಯಾಸಕರಿಗೆ ಎರಡು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಿಗೇ ಶಂಕುಸ್ಥಾಪನೆ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಹೊಸದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ ಎಂದು ಟೀಕಿಸಿದರು.
ಮತದಾರರು ಎರಡೂ ಕ್ಷೇತ್ರಗಳ ಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು
ಬಾಗಲಕೋಟೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪ್ರಚಾರ ಮಾಡುತ್ತಿದ್ದಾರೆ ಎಂದರೆ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಸೋಲಿನ ಕುರಿತು ಇಂಟಲಿಜೆನ್ಸಿ ವರದಿ ನೀಡಿರುತ್ತದೆ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಚಾರಕ್ಕೆ ಬರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಮುಖಂಡರೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದಕ್ಕೆ ಯಾರೇ ಸಹಕಾರ ನೀಡಿದರೂ ಸ್ವಾಗತ ಮಾಡುತ್ತೇನೆ ಎಂದರು.

