ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.
ಪಿಪಿಎಚ್ ಎಸ್ ಶಾಲೆ, ಶಾಂತಿನಿಕೇತನ ಶಾಲೆ ಸೇರಿದಂತೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿಗಳು ನಾಡು ನುಡಿಗೆ ಸಂಬಂಧಿಸಿದ ಗೀತೆಗಳಿಗೆ ನೃತ್ಯ ಮಾಡಿದರು.
ವಿವಿಧ ಕ್ಷೇತ್ರಗಳ 71 ಸಾಧಕರನ್ನು ಸನ್ಮಾನಿಸಲಾಯಿತು.
ಬೈರತಿ ಸುರೇಶ್ ಮಾತನಾಡಿ, ಕನ್ನಡ ಭಾಷೆಯು ನಮ್ಮ ನಡೆ-ನುಡಿ, ಆಚಾರ-ವಿಚಾರ, ಸಂಸ್ಕೃತಿ, ಅಭಿಮಾನ ಮತ್ತು ಅಸ್ಮಿತೆಯ ಪ್ರತೀಕವಾಗಿದೆ ಎಂದರು.
ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದು. ಕನ್ನಡದಲ್ಲಿ ಮಾತನಾಡುವುದು ಮತ್ತು ಬರೆಯುವುದು ಅತ್ಯಂತ ಸುಲಭ ಎಂದು ದ.ರಾ. ಬೇಂದ್ರೆ ಹೇಳಿದ್ದಾರೆ. ಕರ್ನಾಟಕದ ಮಣ್ಣು, ಹವಾಗುಣ ಹಾಗೂ ವೈವಿಧ್ಯಮಯ ಸಂಸ್ಕೃತಿ ದೇಶದ ಜನರನ್ನು ಆಕರ್ಷಿಸುತ್ತಿವೆ. ವಾಣಿಜ್ಯ, ಉದ್ಯಮ ಮತ್ತು ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ವಿಶ್ವದ ಗಮನ ಸೆಳೆಯುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ₹ 3,318.37 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಂದಾಯ ಗ್ರಾಮ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ನಿವೇಶನರಹಿತರಿಗೆ 24,112 ನಿವೇಶನಗಳನ್ನು ಹಂಚುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಎತ್ತಿನಹೊಳೆ ಯೋಜನೆಯಡಿ 5.093 ಟಿಎಂಸಿ ನೀರು ಹಂಚಿಕೆಯ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಬರ ನಿರ್ವಹಣೆಯ ಭಾಗವಾಗಿ 1.53 ಲಕ್ಷ ರೈತರನ್ನು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲಾಗಿದೆ. ಬಿತ್ತನೆ ವೈಫಲ್ಯ ಎದುರಿಸಿರುವ 1.3 ಲಕ್ಷ ರೈತರಿಗೆ ₹140.44 ಕೋಟಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಾಲಿನ ದರವನ್ನು ಪ್ರತಿ ಲೀಟರ್‌ಗೆ₹ 8 ಹೆಚ್ಚಿಸಲಾಗಿದೆ., ಇದರಲ್ಲಿ ₹7 ನೇರವಾಗಿ ರೈತರಿಗೆ ತಲುಪುತ್ತಿದೆ ಎಂದು ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ₹ 200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ, ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಹಾಗೂ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಕಾರ್ಯಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಪ್ರಭು, ಜಿ.ಪಂ ಸಿಇಒ ನವೀನ್ ಭಟ್ ಮತ್ತಿತರರು ಪಾಲ್ಗೊಂಡಿದ್ದರು.

