ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಮೂರು ದಿನಗಳ ಭಾರತದ ಪ್ರವಾಸದ ಭಾಗವಾಗಿ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ.
ವ್ಯಾಪಾರ, ಹೂಡಿಕೆ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ವಿಸ್ತರಿಸುವ ನಿಟ್ಟಿನಲ್ಲಿ ಸನೇ ತಕೈಚಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ '16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ'ಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಸನೇ ತಕೈಚಿ ಅವರು ಭಾರತಕ್ಕೆ ಆಗಮಿಸಿದ ಫೋಟೊಗಳನ್ನು 'ಎಕ್ಸ್'ನಲ್ಲಿ ಹಂಚಿಕೊಂಡಿದ್ದಾರೆ.
'ಮೊದಲ ಭಾರತ ಭೇಟಿಯ ಸಂದರ್ಭದಲ್ಲಿ ನಿಮಗೆ ಆತಿಥ್ಯ ನೀಡಲು ನಾವು ಸಂತೋಷಪಡುತ್ತೇವೆ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇನೆ. ನಮ್ಮ ಜಂಟಿ ಪ್ರಯತ್ನಗಳ ಮೂಲಕ ಇಂಡೋ-ಪೆಸಿಫಿಕ್ ಮತ್ತು ಅದರಾಚೆಗಿನ ಪ್ರದೇಶಗಳಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ಸಾಧಿಸುವುದನ್ನು ಮುಂದುವರಿಸುತ್ತೇವೆ' ಎಂದು ಪ್ರಧಾನಿ ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸನೇ ತಕೈಚಿ ಅವರು ಗುರುವಾರ ಹೈದರಾಬಾದ್ ಹೌಸ್‌ನಲ್ಲಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

