ಶಿವಮೊಗ್ಗ: 'ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳ ಅನುದಾನದ ಮೇಲೆಯೇ ಅವಲಂಬಿತವಾಗದೆ, ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳು ಸ್ವಂತ ಆದಾಯ ಮೂಲಗಳ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು' ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ, ಬರ ಪರಿಸ್ಥಿತಿ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
'ಸ್ಥಳೀಯ ಸಂಸ್ಥೆಗಳು ಖಾಲಿ ನಿವೇಶನಗಳು, ಕಟ್ಟಡಗಳ ಮೇಲಿನ ಆಸ್ತಿ ತೆರಿಗೆ, ಬಾಡಿಗೆ, ವಿವಿಧ ಶುಲ್ಕಗಳು ಹಾಗೂ ಇತರ ತೆರಿಗೆಗಳನ್ನು ಸಮರ್ಪಕವಾಗಿ ಸಂಗ್ರಹಿಸಿ ಶೇ 100ರಷ್ಟು ತೆರಿಗೆ ವಸೂಲಾತಿ ಸಾಧಿಸಬೇಕು. ಮುಂಬರುವ ದಿನಗಳಲ್ಲಿ ಸರ್ಕಾರದ ಅನುದಾನವನ್ನೇ ನಿರೀಕ್ಷಿಸದೆ ಸ್ವಾವಲಂಬನೆಯತ್ತ ಹೆಜ್ಜೆ ಇಡಬೇಕು' ಎಂದು ತಿಳಿಸಿದರು.
'ಪ್ರತಿದಿನ ಸಂಗ್ರಹವಾಗುವ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ತ್ಯಾಜ್ಯ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಅಮೃತ ಯೋಜನೆಯಡಿ ನಡೆಯುತ್ತಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು' ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
'ಪೌರಕಾರ್ಮಿಕರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು. ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಅಧಿಕಾರಿಗಳನ್ನು ನೇಮಿಸಿ ಆಹಾರದ ಗುಣಮಟ್ಟವನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು. ಸಿಸಿಟಿವಿ ಕ್ಯಾಮೆರಾಗಳನ್ನೂ ಅಳವಡಿಸಬೇಕು' ಎಂದು ಸೂಚಿಸಿದರು.
ದೂರದೃಷ್ಟಿ ಯೋಜನೆ ಇರಲಿ: 'ಕೆರೆಗಳ ಅಭಿವೃದ್ಧಿ, ಉದ್ಯಾನಗಳ ಹಸಿರೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು. ನಗರಗಳ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ವರ್ತುಲ ರಸ್ತೆಗಳ ನಿರ್ಮಾಣ ಸೇರಿದಂತೆ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಬೇಕು' ಎಂದು ಸಲಹೆ ನೀಡಿದರು.
ರೈತರಿಗೆ ಸಲಹೆ ನೀಡಿ: 'ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇತ್ತೀಚಿನ ಮಳೆಯಿಂದ ಸ್ವಲ್ಪ ನಿರಾಳತೆ ಸಿಕ್ಕಿದ್ದರೂ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರ್ಯಾಯ ಬೆಳೆಗಳ ಕುರಿತು ಮಾರ್ಗದರ್ಶನ ನೀಡಬೇಕು. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು' ಎಂದು ತಾಕೀತು ಮಾಡಿದರು.
ವಿಬಿ ಜಿ ರಾಮ್‌ಜಿ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿ ಸಾಧಿಸಲಾಗಿದ್ದು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿರುವ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-42-1603865511

