ಲಾ ಗ್ವೈರಾ: ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಿಂದ ಮೃತಪಟ್ಟವರ ಸಂಖ್ಯೆ ಶುಕ್ರವಾರದ ವೇಳೆಗೆ 920ಕ್ಕೆ ಏರಿಕೆಯಾಗಿದೆ. ಸಹಸ್ರಾರು ಮಂದಿ ನಾಪತ್ತೆಯಾಗಿದ್ದಾರೆ.
ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರಿಸಿವೆ.
ಕ್ಯಾರಕಾಸ್‌ನಲ್ಲಿ ಕಟ್ಟಡಗಳು ಉರುಳಿರುವ ಪ್ರದೇಶಕ್ಕೆ ಭೇಟಿ ನೀಡಿದ ಮಧ್ಯಂತರ ಸರ್ಕಾರದ ನಾಯಕಿ ಡೆಲ್ಸಿ ರೊಡ್ರಿಗಸ್ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದಿಂದ ಸೂಕ್ತ ಸ್ಪಂದನೆ ಅಥವಾ ತುರ್ತು ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಸಮಾಧಾನ ಹೆಚ್ಚಾಗಿದೆ.
ರಿಕ್ಟರ್ ಮಾಪನದಲ್ಲಿ 7.2 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಬುಧವಾರ ಸಂಜೆ ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿವೆ. ಇದರಿಂದಾಗಿ ದೇಶದ ಉತ್ತರ ಭಾಗದಲ್ಲಿ ಹಲವು ಕಟ್ಟಡಗಳು ನೆಲಸಮಗೊಂಡಿವೆ. ದುರಂತದಿಂದಾಗಿ 50,000ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ನೆರವು ಮುಖ್ಯಸ್ಥ ಟಾಮ್ ಫ್ಲೆಚರ್ ತಿಳಿಸಿದ್ದಾರೆ.

