ಕಾರ್ಕಳ: ಯುವಜನರು ದೇಶಕ್ಕೆ ಶಕ್ತಿಯಾಗಿ ಬೆಳೆಯಬೇಕೇ ವಿನಾ ಮಾರಕವಾಗಬಾರದು ಎಂದು ಕಾರ್ಕಳ ನಗರ ವಲಯದ ಎಎಸ್‌ಐ ಶಿವಕುಮಾರ್ ಎಸ್ ಆರ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ತಾಲ್ಲೂಕು ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆ ಸಹಭಾಗಿತ್ವದಲ್ಲಿ ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅಧಃಪತನಕ್ಕೆ ಕಾರಣವಾಗುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಮಾಜದಲ್ಲಿ ಇಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಯಾವ ಭಯವಿಲ್ಲದೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲ ಗಣಪತಿ ಭಟ್ ಮಾತನಾಡಿ, ದುಶ್ಚಟಗಳಿಗೆ ದಾಸರಾಗದೆ ಉತ್ತಮ ಬದುಕು ನಡೆಸುವ ಸಂಕಲ್ಪ ಮಾಡಬೇಕು ಎಂದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-28-467630121

