Dailyhunt Logo
  • Light mode
    Follow system
    Dark mode
    • Play Story
    • App Story

ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ?ಸರ್ಕಾರದ ಉತ್ತರವೇನು?

Pratidhvani 10 hrs ago

ಕೋವಿಡ್ ಮಹಾಮಾರಿಯಂತಹ ಸಂಕಷ್ಟದ ಸಮಯದಲ್ಲಿ ಪ್ರಾಣದ ಹಂಗು ತೊರೆದು ಜನರ ಆರೋಗ್ಯ ರಕ್ಷಣೆಗೆ ಶ್ರಮಿಸಿದ್ದ ಆಶಾ ಕಾರ್ಯಕರ್ತೆಯರು ಇದೀಗ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೀದಿಗಿಳಿದಿದ್ದಾರೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 17ರಿಂದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (AIUTUC ಸಂಯೋಜಿತ) ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯುತ್ತಿದೆ.

ಈ ಹೋರಾಟ ಇದೀಗ ರಾಜಕೀಯ ವಾಕ್ಸಮರಕ್ಕೂ ವೇದಿಕೆಯಾಗಿದೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ದೆಹಲಿಯ ಜಂತರ್ ಮಂತರ್‌ನಲ್ಲಿ ಸಣ್ಣ ಪ್ರತಿಭಟನೆ ನಡೆದರೂ ತಕ್ಷಣ ಧಾವಿಸುವ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ನ್ಯಾಯಕ್ಕಾಗಿ ಹೋರಾಡುತ್ತಿದ್ದರೂ ಮೌನವಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆದಾಗ ಗಮನ ಹರಿಸುವ ಗಾಂಧಿ ಕುಟುಂಬಕ್ಕೆ ಕರ್ನಾಟಕದ ಆಶಾ ಕಾರ್ಯಕರ್ತೆಯರ ಸಂಕಷ್ಟ ಏಕೆ ಕಾಣುತ್ತಿಲ್ಲ?ಪ್ರತಿಭಟನೆಗಳಿಗೆ ಬೆಂಬಲ ನೀಡುವ ವಿಚಾರದಲ್ಲೂ ಆಯ್ದ ನಿಲುವು ಅನುಸರಿಸಲಾಗುತ್ತಿದೆಯೇ? ಇದು ಅನುಕೂಲಕ್ಕೆ ತಕ್ಕ ಒಗ್ಗಟ್ಟು ಮತ್ತು ಕಾಂಗ್ರೆಸ್‌ನ ಬೂಟಾಟಿಕೆ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.

ಕಾರ್ಮಿಕರ ನಡುವೆ ಒಡಕು ಮೂಡಿಸುವ ಪ್ರಯತ್ನವೇ?

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದರೆ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ಹಾಗೂ ಅತಿಥಿ ಶಿಕ್ಷಕರೂ ಇದೇ ರೀತಿಯ ಬೇಡಿಕೆ ಮುಂದಿಡುತ್ತಾರೆ ಎಂಬ ಸರ್ಕಾರದ ವಾದಕ್ಕೆ ಸಂಘಟನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಮತ್ತು ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಒಂದು ವರ್ಗದ ಕಾರ್ಮಿಕರ ಸಂಕಷ್ಟವನ್ನು ಮುಂದಿಟ್ಟುಕೊಂಡು ಮತ್ತೊಂದು ವರ್ಗದ ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇಂತಹ ವಾದವು ಶ್ರಮಿಕ ವರ್ಗದ ನಡುವೆ ಒಡಕು ಮೂಡಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

‘ಒಂದೇ ದಿನದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನೂ ಸಂಘಟನೆ ಪ್ರಶ್ನಿಸಿದೆ. ಕಳೆದ ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯರು ತಿಂಗಳಿಗೆ 15,000 ರೂ. ಗೌರವಧನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. 2025ರ ಜನವರಿಯಲ್ಲಿಯೂ ಸರ್ಕಾರ ಭರವಸೆ ನೀಡಿದ್ದರೂ ಬೇಡಿಕೆ ಈಡೇರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ 10,000 ರೂ. ಗೌರವಧನದ ಭರವಸೆಯೂ ಇನ್ನೂ ಜಾರಿಯಾಗಿಲ್ಲ ಎಂದು ಸಂಘಟನೆ ಆರೋಪಿಸಿದೆ.

ಕಳೆದ ಒಂಬತ್ತು ವರ್ಷಗಳಲ್ಲಿ ರಾಜ್ಯ ಸರ್ಕಾರ ಹೆಚ್ಚಿಸಿರುವ ಗೌರವಧನ ಕೇವಲ 1,500 ರೂ. ಮಾತ್ರ. ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಮಾದರಿಯಲ್ಲಿ ಕನಿಷ್ಠ 12,000 ರೂ. ನಿಶ್ಚಿತ ಗೌರವಧನ ನೀಡಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಸಂಘಟನೆ ಪ್ರಶ್ನಿಸಿದೆ.

ಆರ್ಥಿಕ ಮುಗ್ಗಟ್ಟಿನ ನೆಪವೊಡ್ಡಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಸಂಘಟನೆ ಹಲವು ಆರ್ಥಿಕ ಅಂಕಿಅಂಶಗಳನ್ನು ಮುಂದಿಟ್ಟಿದೆ.

ಕಳೆದ ಮೂರು ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಪ್ರೋತ್ಸಾಹಧನದ ರೂಪದಲ್ಲಿ ಸುಮಾರು 11,000 ಕೋಟಿ ರೂ. ನೀಡಲಾಗಿದೆ. ಇದರಲ್ಲಿ ಶೇ.5ರಷ್ಟು ಮೊತ್ತವನ್ನು ಕಡಿತಗೊಳಿಸಿದರೂ ರಾಜ್ಯದ 41,000 ಆಶಾ ಕಾರ್ಯಕರ್ತೆಯರಿಗೆ ಗೌರವಯುತ ಬದುಕು ಕಲ್ಪಿಸಲು ಅಗತ್ಯವಿರುವ 492 ಕೋಟಿ ರೂ. ಹೊಂದಿಸಬಹುದು ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಇದೇ ಅವಧಿಯಲ್ಲಿ ಜಾಹೀರಾತುಗಳಿಗಾಗಿ ಸುಮಾರು 500 ಕೋಟಿ ರೂ. ಖರ್ಚು ಮಾಡಲಾಗಿದೆ. ಅಲ್ಲದೆ, ಸಂಸದರಿಗೆ ತಲಾ 30 ಲಕ್ಷ ರೂ. ಮೌಲ್ಯದ ಕಾರುಗಳನ್ನು ನೀಡಲಾಗಿದೆ. ಸುರಂಗ ರಸ್ತೆ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡಲು ಮುಂದಾಗಿರುವ ಸರ್ಕಾರ, ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ 20,000 ಕೋಟಿ ರೂ. ಮಂಜೂರು ಮಾಡಿದೆ. ಇಂತಹ ಯೋಜನೆಗಳಿಗೆ ಹಣ ಹೊಂದಿಸುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಹಣವಿಲ್ಲವೇ ಎಂದು ಸಂಘಟನೆ ಪ್ರಶ್ನಿಸಿದೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಮಾತ್ರವಲ್ಲ, ಕೇಂದ್ರ ಸರ್ಕಾರವೂ ನಿರ್ಲಕ್ಷ್ಯ ತೋರುತ್ತಿದೆ ಎಂದು ಸಂಘಟನೆ ಆರೋಪಿಸಿದೆ.

ಆಶಾ ಕಾರ್ಯಕರ್ತೆಯರಿಗೆ 1,500 ರೂ. ಪ್ರೋತ್ಸಾಹಧನ ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಒಂದೂವರೆ ವರ್ಷದ ಹಿಂದೆ ಘೋಷಿಸಿದ್ದರೂ ಇನ್ನೂ ಜಾರಿಗೆ ಬಂದಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನು ಹೆಚ್ಚಿಸಿಲ್ಲ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನಾಕಾರರಿಗೆ ಹಲವರು ಸ್ವಯಂಪ್ರೇರಿತರಾಗಿ ಆಹಾರ, ನೀರು ಮತ್ತು ಆರ್ಥಿಕ ನೆರವು ನೀಡುತ್ತಿದ್ದಾರೆ.ಆದರೆ, ಈ ಹೋರಾಟ ಸಂಪೂರ್ಣ ಸ್ವತಂತ್ರ ಕಾರ್ಮಿಕ ಚಳವಳಿಯಾಗಿದ್ದು, ಯಾವುದೇ ರಾಜಕೀಯ ಪಕ್ಷಗಳಿಂದ ಆರ್ಥಿಕ ಅಥವಾ ವಸ್ತುರೂಪದ ನೆರವು ಸ್ವೀಕರಿಸುವುದಿಲ್ಲ ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ರಾಜಕೀಯ ಪಕ್ಷಗಳ ನಾಯಕರು ಪ್ರತಿಭಟನಾ ಸ್ಥಳಕ್ಕೆ ಬಂದು ಸಾಂತ್ವನ ಹೇಳುವುದಕ್ಕಿಂತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಬೇಡಿಕೆ, ಸರ್ಕಾರದ ಆರ್ಥಿಕ ಆದ್ಯತೆಗಳು ಮತ್ತು ರಾಜಕೀಯ ನಾಯಕರ ಪ್ರತಿಕ್ರಿಯೆ ಇದೀಗ ರಾಜ್ಯ ರಾಜಕಾರಣದಲ್ಲಿ ಚರ್ಚೆಯ ವಿಷಯವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani