
ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸೋಮವಾರ (ನವೆಂಬರ್ 23) ವಿಧಾನಸೌಧಕ್ಕೆ ಆಗಮಿಸಿದ ಅವರು, ವಿಧಾನಸಭಾಧ್ಯಕ್ಷರ ಕಚೇರಿಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಕಾಡಾನೆಗಳ ಸ್ಥಳಾಂತರ ವಿಚಾರವಾಗಿ ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದ ನಯನಾ ಮೋಟಮ್ಮ, ಸೋಮವಾರ ರಾಜೀನಾಮೆ ಪತ್ರದೊಂದಿಗೆ ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ತೆರಳಿದ್ದರು. ಆದರೆ, ಆ ಸಮಯದಲ್ಲಿ ಸ್ಪೀಕರ್ ಕಚೇರಿಯಲ್ಲಿ ಇಲ್ಲದ ಕಾರಣ, ಅವರ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.ನಿಯಮಾವಳಿಗಳ ಪ್ರಕಾರ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಅಂಗೀಕರಿಸುವ ಅಧಿಕಾರ ತಮಗಿಲ್ಲ ಎಂದು ಅಶೋಕ್ ಮಿರ್ಜಿ ಅವರು ತಿಳಿಸಿದ್ದಾರೆ. ಅಲ್ಲದೆ, ಶಾಸಕಿ ರಾಜೀನಾಮೆ ಸಲ್ಲಿಸಿರುವ ವಿಚಾರವನ್ನು ದೂರವಾಣಿ ಮೂಲಕ ಸ್ಪೀಕರ್ ಅವರ ಗಮನಕ್ಕೆ ತಂದಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ (ಮುತ್ತೋಡಿ) ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಅರಣ್ಯ ಇಲಾಖೆಯ ಕ್ರಮಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಗ್ರಾಮಗಳ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕ್ರಮದಿಂದ ಸ್ಥಳೀಯರ ಜೀವ ಮತ್ತು ಕೃಷಿ ಬೆಳೆಗಳಿಗೆ ಅಪಾಯ ಎದುರಾಗಲಿದೆ ಎಂದು ಆತಂಕಗೊಂಡಿರುವ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.ಸ್ಥಳೀಯರ ಹೋರಾಟಕ್ಕೆ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಾದ ನಯನಾ ಮೋಟಮ್ಮ, ಎಚ್.ಡಿ. ತಮ್ಮಯ್ಯ ಹಾಗೂ ಟಿ.ಡಿ. ರಾಜೇಗೌಡ ಅವರು ಬೆಂಬಲ ಸೂಚಿಸಿ, ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಭಾನುವಾರ (ನವೆಂಬರ್ 22) ಸುದ್ದಿಗೋಷ್ಠಿ ನಡೆಸಿದ್ದ ನಯನಾ ಮೋಟಮ್ಮ, ಆನೆಗಳನ್ನು ತಕ್ಷಣವೇ ವಾಪಸ್ ಕಳುಹಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ವೇಳೆ ತಮ್ಮ ರಾಜೀನಾಮೆ ಪತ್ರವನ್ನೂ ಪ್ರದರ್ಶಿಸಿದ್ದರು.”ಜನರ ಜೀವ ಮತ್ತು ಕೃಷಿ ಬೆಳೆಗಳ ರಕ್ಷಣೆ ನಮಗೆ ಮುಖ್ಯವೇ ಹೊರತು ಅಧಿಕಾರವಲ್ಲ. ಈಗಾಗಲೇ ಮೂಡಿಗೆರೆ ಭಾಗಕ್ಕೆ ಸ್ಥಳಾಂತರಿಸಿರುವ ಆನೆಗಳನ್ನು ತಕ್ಷಣವೇ ವಾಪಸ್ ಕಳುಹಿಸಬೇಕು” ಎಂದು ಅವರು ಆಗ್ರಹಿಸಿದ್ದರು.
ಆದರೆ, ಸರ್ಕಾರ ಆನೆಗಳನ್ನು ವಾಪಸ್ ಕಳುಹಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ತಮ್ಮ ಮಾತಿನಂತೆ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಿ ಸರ್ಕಾರದ ವಿರುದ್ಧವೇ ಇಂತಹ ನಿರ್ಧಾರ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ರಾಜೀನಾಮೆ ಪತ್ರದ ಕುರಿತು ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಮತ್ತು ಸರ್ಕಾರ ಈ ವಿವಾದವನ್ನು ಹೇಗೆ ಬಗೆಹರಿಸಲಿದೆ ಎಂಬ ಕುತೂಹಲ ಮೂಡಿದೆ.
