Dailyhunt Logo
  • Light mode
    Follow system
    Dark mode
    • Play Story
    • App Story
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ 'ವಿಶ್ವಕರ್ಮ ಜಯಂತಿ' ಕಾರ್ಯಕ್ರಮದಲ್ಲಿ ಶಾಸಕರಾದ ಡಿ.

ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ 'ನಿರಾಕಾರ ವಿಶ್ವಕರ್ಮ' ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddidina