Dailyhunt Logo
  • Light mode
    Follow system
    Dark mode
    • Play Story
    • App Story
ನುಡಿದಂತೆ ನಡೆದೇ ರಾಜಧರ್ಮ ಪಾಲಿಸಿದ್ದೇನೆ, 17 ಬಜೆಟ್‌ಗಳಲ್ಲಿ ಸಾಮಾಜಿಕ ನ್ಯಾಯಕ್ಕೆ ಆದ್ಯತೆ: ಸಿದ್ದರಾಮಯ್ಯ

ನುಡಿದಂತೆ ನಡೆದೇ ರಾಜಧರ್ಮ ಪಾಲಿಸಿದ್ದೇನೆ, 17 ಬಜೆಟ್‌ಗಳಲ್ಲಿ ಸಾಮಾಜಿಕ ನ್ಯಾಯಕ್ಕೆ ಆದ್ಯತೆ: ಸಿದ್ದರಾಮಯ್ಯ

Suddikshana 1 week ago

ಬೆಂಗಳೂರು: ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ.

ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು ಎಂದು ಹೇಳಿದರು.

ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ.
ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ ಎಂದು ಹೇಳಿದರು.

ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Suddikshana