ದಾವಣಗೆರೆ: ಇಡೀ ದೇಶದಲ್ಲಿ ಬೆಲೆ ಏರಿಕೆಯ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ನೆಮ್ಮದಿ ತಂದಿವೆ. ಜನರ ಸಮಗ್ರ ಅಭಿವೃದ್ಧಿ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯರಗುಂಟೆ, ಕರೂರು ಗ್ರಾಮಗಳು ಮತ್ತು ಅಶೋಕ್ ನಗರದಲ್ಲಿ ಮತದಾರರನ್ನು ಭೇಟಿ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಸಮರ್ಥ್ ಅವರಿಗೆ ಜನರ ನಿರೀಕ್ಷೆಗಳು, ಅಭಿವೃದ್ಧಿಯ ಅಗತ್ಯಗಳು, ವಿಶೇಷವಾಗಿ ಶಿಕ್ಷಣ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳ ಬೇಡಿಕೆಗಳ ಬಗ್ಗೆ ಅರಿವಿದೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸ್ಪಷ್ಟ ಜ್ಞಾನವಿದೆ ಎಂದು ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಈಗಾಗಲೇ ನೂರು ಕೋಟಿ ರೂಪಾಯಿ ಅನುದಾನ ನೀಡಿದ್ದು, ಡಾ. ಶಾಮನೂರು ಶಿವಶಂಕರಪ್ಪಾಜಿ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಮುಂದುವರೆದು ಸಮರ್ಥ್ ಶಾಮನೂರು ಅವರು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಏಪ್ರಿಲ್ 9 ರಂದು ನಡೆಯಲಿರುವ ಮತದಾನದಲ್ಲಿ ಕ್ರಮಸಂಖ್ಯೆ 3 ರ ಹಸ್ತದ ಗುರುತಿಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.

