ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಘಟ್ಟ ತಲುಪಿದೆ. ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಈ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮುಂದೂಡಿದೆ.
ಸುಪ್ರೀಂ ಮೆಟ್ಟಿಲೇರಿದ್ದ ದರ್ಶನ್
ಈ ಹಿಂದೆ ಸುಪ್ರೀಂ ಕೋರ್ಟ್ ದರ್ಶನ್ ಜಾಮೀನನ್ನು ರದ್ದುಗೊಳಿಸಿತ್ತು. ಆದರೆ, ಈಗ ಬದಲಾದ ಸನ್ನಿವೇಶಗಳಲ್ಲಿ ನಟ ದರ್ಶನ್ ಪರ ವಕೀಲ ಮುಕುಲ್ ರೋಹ್ಟಗಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಆರೋಗ್ಯ ಸಮಸ್ಯೆ, ವಿಚಾರಣೆ ವಿಳಂಬ ಹಾಗೂ ಜೈಲಿನಲ್ಲಿ ಎದುರಿಸುತ್ತಿರುವ ಕಷ್ಟಗಳನ್ನು ಉಲ್ಲೇಖಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿದೆ.
ಅರ್ಜಿಯಲ್ಲೇನಿದೆ ?
ಕೊಲೆ ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಜನರ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ಇದೇ ವೇಗದಲ್ಲಿ ವಿಚಾರಣೆ ನಡೆದರೆ ಪ್ರಕರಣ ಮುಗಿಯಲು ಹಲವು ವರ್ಷಗಳೇ ಬೇಕಾಗಬಹುದು ಎಂಬ ಆತಂಕವನ್ನು ಅರ್ಜಿಯಲ್ಲಿ ವ್ಯಕ್ತಪಡಿಸಲಾಗಿದೆ. ನಟ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿ ಸೂಕ್ತ ಚಿಕಿತ್ಸೆ ಮತ್ತು ಸೌಲಭ್ಯಗಳ ಕೊರತೆಯಿದೆ. ದೀರ್ಘಕಾಲದ ಜೈಲುವಾಸದಿಂದ ಅವರ ಚಿತ್ರರಂಗದ ವೃತ್ತಿಜೀವನಕ್ಕೆ ದೊಡ್ಡ ಮಟ್ಟದ ನಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವೇನು?
ನಟ ದರ್ಶನ್ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ತನಿಖೆ ಎಲ್ಲಿಗೆ ಬಂದಿದೆ? ವಿಚಾರಣೆಯ ಪ್ರಗತಿ ಎಷ್ಟು? ಆರೋಪಿಯ ಪ್ರಸ್ತುತ ಸ್ಥಿತಿಗತಿ ಏನು? ಎಂಬ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ವರದಿ ಸಲ್ಲಿಕೆಯಾದ ಬಳಿಕ ಸುಪ್ರೀಂ ಕೋರ್ಟ್ ಕೈಗೊಳ್ಳುವ ನಿರ್ಧಾರವು ನಟ ದರ್ಶನ್ ಭವಿಷ್ಯವನ್ನು ನಿರ್ಧರಿಸಲಿದೆ.

