Dailyhunt Logo
  • Light mode
    Follow system
    Dark mode
    • Play Story
    • App Story
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ!

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ!

ಮಂಗಳೂರು ಜುಲೈ 31: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ, ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ನಿವಾಸಿ ಚುಂಕಿ ಆಕಾಶಭವನ ಯಾನೆ ಸಂತೋಷ್ ಎಸ್. (34) ಬಂಧಿತ ವ್ಯಕ್ತಿ. 2015ರಲ್ಲಿ ಮಂಗಳೂರಿನ ಆಕಾಶಭವನದಲ್ಲಿ ನಡೆದಿದ್ದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ್ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆರೋಪಿ ಚುಂಕಿ ಆಕಾಶಭವನ, ಇತರ ಸಹಚರರಾದ ರಂಜಿತ್, ಧನು, ಧೂಮ, ಸ್ವೀಟಿ ಯಾನೆ ನರೇಶ್ ಹಾಗೂ ಜಗ್ಗು ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಅವರ ಮೇಲೆ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾದ ದಿನದಿಂದಲೂ ಚುಂಕಿ ಆಕಾಶಭವನ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು. ಯಾವುದೇ ಸುಳಿವು ನೀಡದೆ ತಲೆಮರೆಸಿಕೊಂಡಿದ್ದ ಆರೋಪಿಯ ಸುಳಿವು ಪತ್ತೆಹಚ್ಚಿದ ಸಿಸಿಬಿ ಪೊಲೀಸರು, ಶಿವಮೊಗ್ಗದಲ್ಲಿದ್ದ ಆತನ ಚಲನವಲನ ಆಧರಿಸಿ ಜುಲೈ 29ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
Dailyhunt
Disclaimer: This content has not been generated, created or edited by Dailyhunt. Publisher: themangaloremirror