ಬೆಂಗಳೂರು, ಏಪ್ರಿಲ್ 04: ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಅಭಿಮಾನಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡು ಮೊಬೈಲ್ ಲಪಟಾಯಿಸುತ್ತಿದ್ದ ಜಾರ್ಖಂಡ್ ಮೂಲದ ಅಂತರರಾಜ್ಯ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, 18 ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದ್ದು, ಒಟ್ಟು 51 ಬೆಲೆಬಾಳುವ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ (RCB vs SRH) ನಡುವಿನ ಹೈವೋಲ್ಟೇಜ್ ಪಂದ್ಯದ ವೇಳೆ ಈ ಕಳ್ಳತನ ನಡೆದಿದೆ.
ಕದ್ದ ತಕ್ಷಣ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿ ಸಂಕೇತಗಳ ಮೂಲಕ ಪರಸ್ಪರ ವರ್ಗಾಯಿಸುತ್ತಿದ್ದರು.ಕಳೆದ ಪಂದ್ಯದ ವೇಳೆ ಸ್ಟೇಡಿಯಂನ ಗೇಟ್ ಸಂಖ್ಯೆ 1, 2 ಮತ್ತು ಗ್ಯಾಲರಿಗಳಲ್ಲಿ ಅತಿ ಹೆಚ್ಚು ಮೊಬೈಲ್ ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಶೇಖರ್ ಹೆಚ್.ಟಿ. ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ವಶಪಡಿಸಿಕೊಂಡ 51 ಮೊಬೈಲ್‌ಗಳ ಒಟ್ಟು ಮೌಲ್ಯ ಸುಮಾರು 18 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ 29ಕ್ಕೂ ಹೆಚ್ಚು ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

