ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ಪೊಲೀಸ ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದು ಅಪಘಾತ ನಡೆದ ಘಟನೆ ಶನಿವಾರ ಸಂಜೆ ರಾ.ಹೆ 66 ವರದರಾಜ ಹೊಟೇಲ ಬಳಿ ನಡೆದಿದೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸ್ವತಃ ಮುಂದಾಗಿ ನೆರವಾದ ಸಚಿವರು ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಕಾರವಾರದಿಂದ ಉಡುಪಿ ಕಡೆಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಚಿವರ ಬೆಂಗಾವಲು ವಾಹನಕ್ಕೆ ಅಂಕೋಲಾದ ಅಲಗೇರಿ ನಿವಾಸಿ ಸಂದೀಪ್ ನಾಯಕ ಚಲಾಯಿಸುತ್ತಿದ್ದ ಸ್ಕೂಟಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಸಂದೀಪ್ ನಾಯಕ ಗಾಯಗೊಂಡಿದ್ದು, ಘಟನೆ ನಡೆದ ಕೂಡಲೇ ಸಚಿವ ಯು.ಟಿ. ಖಾದರ್ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಬಳಿಕ ಯಾವುದೇ ವಿಳಂಬ ಮಾಡದೆ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ದೊರಕುವಂತೆ ನೋಡಿಕೊಂಡರು.
ಸಚಿವರ ಈ ಮಾನವೀಯ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಅಧಿಕಾರಿಗಳು ಹಾಗೂ ಸ್ಥಳೀಯರು ಅವರ ಸಮಯಪ್ರಜ್ಞೆ ಮತ್ತು ಕಾಳಜಿಯನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

