ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್-ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ಪುತ್ತೂರು ನಿವಾಸಿ ಅಶೋಕ್ (34) ಮೃತ ವ್ಯಕ್ತಿ. ಕಾರು ಬಿ.ಸಿ. ರೋಡ್ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬೈಕ್‌ನ ಮುಂಭಾಗವೂ ಹುಡಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

