ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿಕಲ್ಲು)ಯನ್ನು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೋಟೆಗೆ ರೋಪ್‌ವೇ ನಿರ್ಮಿಸುವಂತೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಅವರು ಪ್ರವಾಸೋದ್ಯಮ ಸಚಿವ ಕೆ.ಜೆ.
ಚಾರ್ಜ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸುಮಾರು 3,000 ಅಡಿ ಎತ್ತರದಲ್ಲಿರುವ ಜಮಲಾಬಾದ್ ಕೋಟೆ ಐತಿಹಾಸಿಕ ಮಹತ್ವದ ಜತೆಗೆ ತನ್ನ ನೈಸರ್ಗಿಕ ಸೌಂದರ್ಯದಿಂದಲೂ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕೋಟೆ ಪ್ರದೇಶದಲ್ಲಿ ರಸ್ತೆ ಸಂಪರ್ಕ, ಕುಡಿಯುವ ನೀರು, ಶೌಚಾಲಯ, ಸುರಕ್ಷತಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಅಗತ್ಯವಿದೆ.
ರೋಪ್‌ವೇ ನಿರ್ಮಾಣದಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗುವ ನಿರೀಕ್ಷೆಯಿದ್ದು, ಸ್ಥಳೀಯವಾಗಿ ಪ್ರವಾಸೋದ್ಯಮ ಆಧಾರಿತ ಉದ್ಯೋಗ, ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದಿದ್ದಾರೆ.
ಜಮಲಾಬಾದ್ ಕೋಟೆಯ ಐತಿಹಾಸಿಕ ಹಿನ್ನೆಲೆ, ಪ್ರವಾಸೋದ್ಯಮ ಸಾಮರ್ಥ್ಯವನ್ನು ಪರಿಗಣಿಸಿ, ಕೋಟೆಗೆ ರೋಪ್‌ವೇ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಬೇಕು ಎಂದು ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

