Dailyhunt Logo
  • Light mode
    Follow system
    Dark mode
    • Play Story
    • App Story

ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ವಿಡಿಯೋದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಒಕ್ಕೂಟದ ಪ್ರಮುಖ ಮೋಹನ್ ಮೌರ್ಯ ಅವರು ಮಾತನಾಡಿ ಸಮಾಜದ ಕೆಳಸ್ತರದ ಬಡ ಹಾಗೂ ಹಿಂದುಳಿದ ಜನರ ಧ್ವನಿಯಾಗಿ, ಅವರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ರೂಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವ ಮಂಡ್ಯದ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಈಗಾಗಲೇ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ, ಸಂವಿಧಾನದ ಮೂಲಕ ದೇಶದ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ತುಚ್ಛವಾಗಿ ಮಾತನಾಡಿರುವ ವ್ಯಕ್ತಿಯ ವಿರುದ್ಧದ ಹೋರಾಟ ಕೇವಲ ದಲಿತ ಸಮುದಾಯಕ್ಕೆ ಸೀಮಿತವಾಗಬಾರದು ಎಂದರು.

ಅಂಬೇಡ್ಕರ್ ಅವರ ಕುರಿತು ನಡೆಯುತ್ತಿರುವ ಇಂತಹ ಘಟನೆಗಳಿಗೆ ರಾಜಕೀಯ ಮುಖಂಡರು ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಿಪಿಐಎಂಎಲ್ ಪ್ರಮುಖ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಡಾ.ಅಂಬೇಡ್ಕರ್, ಬಸವಣ್ಣ ಹಾಗೂ ಗೌತಮ ಬುದ್ಧರ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಚ್ಛವಾದ ಹೇಳಿಕೆಗಳನ್ನು ನೀಡಲಾಗಿದೆ. ಇಂತಹ ಹೇಳಿಕೆಗಳ ಹಿಂದೆ ಕೋಮುವಾದಿ ಹಾಗೂ ಮನುವಾದಿ ಮನಸ್ಥಿತಿಗಳ ಪಿತೂರಿ ಅಡಗಿದೆ ಎಂದು ಆರೋಪಿಸಿದರು.

ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಅಡಿಯಲ್ಲೇ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ಪಡೆಯುತ್ತಿವೆ. ಆದರೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕುರಿತು ರಾಜಕೀಯ ಪಕ್ಷಗಳ ಮುಖಂಡರು ಮೌನ ವಹಿಸಿರುವುದು ಖಂಡನೀಯ ಎಂದರು.

ಮಡಿಕೇರಿ ನಗರಸಭಾ ಸದಸ್ಯ ಎಸ್.ಸಿ.ಸತೀಶ್ ಮಾತನಾಡಿ, ಡಾ. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಮೂಹವಷ್ಟೇ ಹೋರಾಟ ನಡೆಸುತ್ತಿರುವುದು ದುರಂತ. ಇಂತಹ ಹೋರಾಟ ಸಮಾಜದ ಎಲ್ಲಾ ಸ್ತರಗಳಲ್ಲೂ ನಡೆಯಬೇಕಿದೆ ಎಂದರು. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಹಾಗೂ ಮಹಾನ್ ವ್ಯಕ್ತಿಗಳ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಹೆಚ್.ಎಲ್.ಗಣೇಶ್, ವಿನಯ್, ಕೆ.ಬಿ.ರಾಜು, ಎಚ್.ಡಿ.ಚಂದ್ರು, ಲೋಕೇಶ್ ಕುಶಾಲನಗರ, ಸುಶೀಲ, ಜನಾರ್ಧನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi