Dailyhunt
ಎಚ್.ಡಿ.ಕುಮಾರಸ್ವಾಮಿ-ಎಂ.ಚಂದ್ರಶೇಖರ್‌ ಪ್ರಕರಣದಲ್ಲಿ ಮಧ್ಯಸ್ಥಿಕೆದಾರರ ನೇಮಕಾತಿ : ಹೈಕೋರ್ಟ್

ಎಚ್.ಡಿ.ಕುಮಾರಸ್ವಾಮಿ-ಎಂ.ಚಂದ್ರಶೇಖರ್‌ ಪ್ರಕರಣದಲ್ಲಿ ಮಧ್ಯಸ್ಥಿಕೆದಾರರ ನೇಮಕಾತಿ : ಹೈಕೋರ್ಟ್

ಬೆಂಗಳೂರು : ಲೋಕಾಯುಕ್ತ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್‌ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇತ್ಯರ್ಥಪಡಿಸಲು ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಗುವುದು ಎಂದು ಹೈಕೋರ್ಟ್‌ ತಿಳಿಸಿದೆ.

ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ನಗರದ 42ನೇ ಎಸಿಎಂಎಂ ನ್ಯಾಯಾಲಯದ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ವಿಚಾರಣೆ ರದ್ದು ಕೋರಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠ, ಈ ಹಿಂದೆ ನ್ಯಾಯಾಲಯ ನೀಡಿದ್ದ ಸಲಹೆಯಂತೆ ಪ್ರಕರಣವನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲು ಮಧ್ಯಸ್ಥಿಕೆದಾರರನ್ನು ನೇಮಕ‌ ಮಾಡಲು ಎಚ್.ಡಿ. ಕುಮಾರಸ್ವಾಮಿ ಹಾಗೂ ದೂರುದಾರ ಚಂದ್ರಶೇಖರ್ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ನ್ಯಾಯಾಲಯವೇ ಸೂಕ್ತ ಮಧ್ಯಸ್ಥಿಕೆದಾರರ ನೇಮಕ ಮಾಡಲಿದೆ. ಜತೆಗೆ, ಮಧ್ಯಸ್ಥಿಕೆದಾರರ ಮುಂದೆ ಅರ್ಜಿದಾರರು ಹಾಗೂ ದೂರುದಾರರು ಮಾತುಕತೆ ನಡೆಸಲು ಹಾಜರಾಗಬೇಕಾದ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಿತು.

ಪ್ರಕರಣವೇನು?

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿಯಲ್ಲಿ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜತೆಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್‌ ತನಿಖಾ ದಳದ ಮುಖ್ಯಸ್ಥರಾದ ಎಂ. ಚಂದ್ರಶೇಖರ್‌ 2024ರಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 224 (ಸರ್ಕಾರಿ ನೌಕರರಿಗೆ ಅವರ ಅಧಿಕೃತ ಕರ್ತವ್ಯಗಳ ಮೇಲೆ ಪ್ರಭಾವ ಬೀರಲು ಬೆದರಿಕೆ ಹಾಕಿದೆ) ಆರೋಪದಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣವನ್ನು ನಗರದ 42ನೇ ಎಸಿಎಂಎಂ ನ್ಯಾಯಾಲು ವಿಚಾರಣೆ ನಡೆಸುತ್ತಿದೆ. ಇದರಿಂದ, ಎಫ್‌ಐಆರ್‌ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi