Dailyhunt Logo
  • Light mode
    Follow system
    Dark mode
    • Play Story
    • App Story
ಕೋಟೇಶ್ವರ: ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ 'ಕೊಡಿಹಬ್ಬ'

ಕೋಟೇಶ್ವರ: ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ 'ಕೊಡಿಹಬ್ಬ'

ಕುಂದಾಪುರ, ನ.24: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ವೈಭವದ ಬ್ರಹ್ಮ ರಥೋತ್ಸವ 'ಕೊಡಿ ಹಬ್ಬ'ಕ್ಕೆ ಸಹಸ್ರಾರು ಮಂದಿ ಭಕ್ತರು ಸಾಕ್ಷಿಯಾದರು.

ಈ ಬಾರಿಯ ಕೊಡಿ ಹಬ್ಬಕ್ಕಾಗಿ ಗುರುವಾರ ನಸುಕಿನಿಂದಲೆ ಧಾರ್ಮಿಕ ಆಚರಣೆಗೆ ತೊಡಗಿದ ಭಕ್ತರು, ಬೆಳಿಗ್ಗೆ 11.05ರ ಮಕರ ಲಗ್ನ ಸುಮುಹೂರ್ತದಲ್ಲಿ ನಡೆದ ಮನ್ಮಹಾರಥೋತ್ಸವದ ಆರೋಹಣವನ್ನು ಕಣ್ಮನದಲ್ಲಿ ತುಂಬಿ ಕೊಂಡರು.

ತಂತ್ರಿ, ಪ್ರಧಾನ ಅರ್ಚಕ ಪ್ರಸನ್ನಕುಮಾರ ಐತಾಳ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು.

ಮುಂಜಾನೆ ಸೂರ್ಯ ಉದಯಕ್ಕೆ ಮುಂಚೆ ಇತಿಹಾಸ ಪ್ರಸಿದ್ದ ಕೋಟಿ ತೀರ್ಥ ಸರೋವರದಲ್ಲಿ ಶುಚಿಭೂತರಾಗಿ ದೇವಸ್ಥಾನಕ್ಕೆ ಬರುವ ಭಕ್ತರು ಸರೋವರದ ಸುತ್ತ ಅಪೇಕ್ಷಿತರು ಹಾಸಿದ ಬಿಳಿ ಬಟ್ಟೆಯ ಮೇಲೆ ಮುಡಿ ಅಕ್ಕಿ ಚಲ್ಲುವ ಪಾರಂಪರಿಕ ಸುತ್ತಕ್ಕಿ ಸೇವೆಯಲ್ಲಿ ಪಾಲ್ಗೊಂಡ ಬಳಿಕ ದೇವರ ದರ್ಶನ ಪಡೆದು ಸಂಪ್ರದಾಯಬದ್ದ ಪೂಜೆ ಸಲ್ಲಿಸಿದರು.

ಬೆಳಿಗ್ಗೆ ದೇವಸ್ಥಾನದಿಂದ ಋತ್ವೀಜರು, ಪಂಚವಾದ್ಯಗಳು, ಪಾರಂಪರಿಕ ಸೂರ್ಯ ವಾದ್ಯ, ಚಂಡೆ, ತಟ್ಟಿರಾಯ ಸಹಿತ ವೈಭವದ ಮೆರವಣಿಗೆಯಲ್ಲಿ ಬಂದ ಕೋಟಿಲಿಂಗೇಶ್ವರ, ಕೋಟಿಲಿಂಗೇಶ್ವರ ಗೋಳೆ (ಮುಖವಾಡ), ತಾಂಡವೇಶ್ವರ ಹಾಗೂ ಬಿದಿರಿನ ಕೊಡಿಯನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿದ ಬಳಿಕ ಹಣ್ಣುಕಾಯಿ ಸೇವೆ ಸಲ್ಲಿಸಿದ ಬಳಿಕ ಮಂಗಳಾರತಿ ನೆರವೇರಿಸಲಾಯಿತು. ರಥದ ಚಕ್ರಕ್ಕೆ ಕಾಯಿ ಒಡೆಯುವ ಸೇವೆಗಳನ್ನು ಮುಗಿಸಿ, ರಥ ಬೀದಿಯಲ್ಲಿ ರಥವನ್ನು ಎಳೆಯುವ ಮೂಲಕ ರಥೋತ್ಸವವನ್ನು ಆಚರಿಸಲಾಯಿತು. ನೆರೆದಿದ್ದ ಸಾವಿರಾರು ಮಂದಿ ಭಕ್ತರು ಜಯಘೋಷ ಮಾಡಿದರು.

ಸಂಜೆಯ ಸುಮಹೂರ್ತದಲ್ಲಿ ಬ್ರಹ್ಮರಥದ ಅವರೋಹಣ ನಡೆಸಿ ಉತ್ಸವ ಮೂರ್ತಿಯನ್ನು ಮರಳಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು. ಜಾತ್ರೆಯ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದವು. ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ಉಚಿತ ಪಾನಕ ಹಾಗೂ ಪಾನೀಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಸ್ಥಳವಂದಿಗರು ಮೊದಲಾದವರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi