Dailyhunt
ಮಂಗಳೂರು| ಗಾಂಜಾ ಸಾಗಾಟ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು| ಗಾಂಜಾ ಸಾಗಾಟ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು, ಎ.2: ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಲಕ್ಷದ್ವೀಪ ಕಿಲ್ತಾನ್ ಐಲ್ಯಾಂಡ್ ನಿವಾಸಿ ಸಲಾಹುದ್ದೀನ್ (28) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತ್ವರಿತ ನ್ಯಾಯಾಲಯವು 6 ತಿಂಗಳ ಜೈಲುಶಿಕ್ಷೆ ಮತ್ತು 10 ಸಾವಿರ ರೂ.

ದಂಡ ವಿಧಿಸಿ ತೀರ್ಪು ನೀಡಿದೆ.

ಕಸಬಾ ಗ್ರಾಮದ ಹಳೆ ಬಂದರು ದಕ್ಕೆಯಲ್ಲಿ 2020ರ ಜ.30ರಂದು ಆರೋಪಿ ಗಾಂಜಾವನ್ನು ಹಡಗಿನಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಕರಾವಳಿ ಕಾವಲು ಪಡೆಯ ಪೊಲೀಸರು 100 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯನ್ನು ಬಿಡುಗಡೆ ಗೊಳಿಸಿತ್ತು. ಆದರೆ ಈ ಆದೇಶದ ವಿರುದ್ಧ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ನ್ಯಾಯಾಧೀಶ ಮೋಹನ್ ಜೆ.ಎಸ್. ಸರಕಾರ ಹಾಗೂ ಆರೋಪಿ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.

ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಬದರಿನಾಥ ನಾಯರಿ ವಾದ ಮಂಡಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi