Dailyhunt Logo
  • Light mode
    Follow system
    Dark mode
    • Play Story
    • App Story
Meghalaya | ರಾಜಾ ರಘುವಂಶಿ ಕೊಲೆ ಪ್ರಕರಣ : ಆರೋಪಿ ಸೋನಂ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

Meghalaya | ರಾಜಾ ರಘುವಂಶಿ ಕೊಲೆ ಪ್ರಕರಣ : ಆರೋಪಿ ಸೋನಂ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಹೊಸದಿಲ್ಲಿ: ಮೇಘಾಲಯ ರಾಜಾ ರಘುವಂಶಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋನಂ ರಘುವಂಶಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಪ್ರಕರಣದ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕೋರಿ ಮೇಘಾಲಯ ಪೊಲೀಸರು ಸಲ್ಲಿಸಿದ ಅರ್ಜಿ ಕುರಿತು ನೋಟಿಸ್ ಜಾರಿ ಮಾಡಿದೆ.

ಸೋನಂ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಮತ್ತು ಜಾಮೀನು ಪ್ರಶ್ನಿಸಿ ಮೇಘಾಲಯ ಪೊಲೀಸರು ಸಲ್ಲಿಸಿರುವ ಅರ್ಜಿಯನ್ನು ವಿವರವಾಗಿ ಪರಿಶೀಲಿಸಲು ಒಪ್ಪಿಗೆ ನೀಡಿದೆ.

ಸೋನಂ ಅವರು ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದಾಗ ಈ ಹಂತದಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ, ಸೋನಂಗೆ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡುವ ಬಗ್ಗೆ ನ್ಯಾಯಾಲಯ ಒಲವು ತೋರಿಸಿತ್ತು. ಆದರೆ ಆಕೆ ಈಗಾಗಲೇ ಬಿಡುಗಡೆಯಾಗಿರುವ ಮಾಹಿತಿ ದೊರೆತ ಬಳಿಕ ಆ ನಿರ್ಧಾರದಿಂದ ಹಿಂದೆ ಸರಿಯಿತು.

ಮೇಘಾಲಯ ಪೊಲೀಸರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸೋನಂ ಸಲ್ಲಿಸಿದ್ದ ಹಿಂದಿನ ಜಾಮೀನು ಅರ್ಜಿಗಳು ತಿರಸ್ಕೃತವಾಗಿದ್ದವು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಬಂಧನದ ಕಾರಣವನ್ನು ತಿಳಿಸದೇ ಬಂಧಿಸಲಾಗಿದೆ ಎಂಬ ಆರೋಪ ಈ ಪ್ರಕರಣದಲ್ಲಿ ಅನ್ವಯಿಸುವುದಿಲ್ಲ. ಕೇವಲ ಒಂದು ಸೆಕ್ಷನ್ ಉಲ್ಲೇಖಿಸುವ ವೇಳೆ ತಾಂತ್ರಿಕ ತಪ್ಪು ನಡೆದಿದ್ದು, ಅದನ್ನೇ ಆಧಾರವಾಗಿ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ತುಷಾರ್ ಮೆಹ್ತಾ ಹೇಳಿದರು.

ಏನಿದು ಪ್ರಕರಣ?

ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಂ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದಾರೆ. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಿಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದಾರೆ. ಈ ವೇಳೆ ಅವರು ಎರಡು ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು.

ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ ಒಂದು ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು.

11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

ಸೋನಮ್ ನಾಪತ್ತೆ ನಿಗೂಢವಾಗಿಯೇ ಇತ್ತು. ಆಕೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಬಳಿಕ ತನ್ನ ಕುಟುಂಬಸ್ಥರಿಗೆ ಕರೆ ಮಾಡಿದ ಆಕೆ ತಾನು ಘಾಝಿಪುರದಲ್ಲಿ ಇರುವುದಾಗಿ ತಿಳಿಸಿದ್ದಳು. ಈ ಬಗ್ಗೆ ಆಕೆಯ ಕುಟುಂಬವು ಇಂದೋರ್ ಪೊಲೀಸರಿಗೆ ಮಾಹಿತಿ ನೀಡಿದೆ. ಉತ್ತರ ಪ್ರದೇಶ ಪೊಲೀಸರ ಸಹಾಯದಿಂದ ಆಕೆಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿತ್ತು.

ಸೋನಮ್‌ಗೆ ರಾಜ್ ಕುಶ್ವಾಹ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು. ಇದೇ ಕಾರಣಕ್ಕೆ ಆಕೆ ಪತಿಯ ಕೊಲೆಗೆ ಸಂಚು ರೂಪಿಸಿದ್ದಳು. ಮೇಘಾಲಯದಲ್ಲಿ ಹನಿಮೂನ್‌ಗೆ ತೆರಳಿದ ವೇಳೆ ಸೊಹ್ರಾ ಪ್ರದೇಶದಲ್ಲಿ ಪತಿಯನ್ನು ಕೊಲೆ ಮಾಡಲು ಆಕೆ ಮಧ್ಯಪ್ರದೇಶ ಮೂಲದ ಬಾಡಿಗೆ ಕೊಲೆಗಾರರನ್ನು ನೇಮಿಸಿದ್ದಳು.

Dailyhunt
Disclaimer: This content has not been generated, created or edited by Dailyhunt. Publisher: Varthabharathi