ಬೆಂಗಳೂರು
ಶಶಿಕಲಾ ಆಪ್ತೆ ಇಳವರಸಿಗೂ ಕೊರೋನ ಸೋಂಕು ದೃಢ: ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ

ಬೆಂಗಳೂರು, ಜ.23: ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ನಟರಾಜ್ ಅವರ ಆಪ್ತೆ ಇಳವರಸಿ ಅವರಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಕಳೆದ ಮೂರು ದಿನಗಳ ಹಿಂದೆ ಪರಪ್ಪನ ಅಗ್ರಹಾರದಲ್ಲಿ ನಡೆದ ಕೋವಿಡ್-19 ಪರೀಕ್ಷೆಯ ಫಲಿತಾಂಶ ಹೊರಬಂದಿದ್ದು, ಸೋಂಕಿಗೆ ಇಳವರಸಿ ಗುರಿಯಾಗಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮತ್ತೊಂದೆಡೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಶಶಿಕಲಾ ಅವರು ಪ್ರಜ್ಞಾವಸ್ಥೆಯಲ್ಲೇ ಇದ್ದಾರೆ. ಉಸಿರಾಟ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ ಸಮಸ್ಯೆಯು ಸಾಧಾರಣ ಸ್ಥಿತಿಗೆ ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಶಶಿಕಲಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಹಾಗಾಗಿ, ವೈದ್ಯರು ಸ್ಪಷ್ಟನೆ ನೀಡಿದ್ದಾರೆ.