ಸಿಂಧನೂರು : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದ್ದು, ನಡೆಯುತ್ತಿರುವ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ನಡೆದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯನ್ನು ಎರಡು ಪ್ರಮುಖ ಪಕ್ಷಗಳು ಅತ್ಯಂತ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಜನತೆ ಬೇಸತ್ತು ಹೋಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಬೇಕು ಎಂಬ ಮನೋಭಾವ ಜನರಲ್ಲಿ ಕಂಡುಬರುತ್ತಿದೆ ಎಂದು ಹೇಳಿದರು.
ಉಪಚುನಾವಣೆ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ತೆರಳುತ್ತಿರುವುದಾಗಿ ತಿಳಿಸಿದ ಅವರು, ದಾವಣಗೆರೆ ಕ್ಷೇತ್ರದಲ್ಲಿ ಎರಡು ಸಭೆಗಳಲ್ಲಿ ಹಾಗೂ ಭಾನುವಾರ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದರು.
ಎರಡೂ ಪಕ್ಷಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿದ್ದರೂ, ಅಂತಿಮವಾಗಿ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

