ಬೆಂಗಳೂರು: ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡಲು ಕಾಂಗ್ರೆಸ್ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಸಭೆಯಲ್ಲಿ ಒಟ್ಟು 8 ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ಓದಲಾಯಿತು.
ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಶಾಸಕರು, ಸಚಿವರು ಹಾಗೂ ಕೆಪಿಸಿಸಿ ಸದಸ್ಯರು ಭಾಗಿಯಾಗಿದ್ದರು. ಪಕ್ಷ ಸಂಘಟನೆ, ಮುಂದಿನ ಕಾರ್ಯಯೋಜನೆಯ ಬಗ್ಗೆ ಈ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದವು.
ಸಭೆಯಲ್ಲಿ ಬಿ.ಕೆ.ಹರಿಪ್ರಸಾದ್ ಮಾತನಾಡಿ, "ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶಿತ ಹುದ್ದೆಗಳು ಆರು ತಿಂಗಳಿಗಿಂತ ಹೆಚ್ಚು ಅವಧಿ ಖಾಲಿ ಇರುವಂತಿಲ್ಲ. ಎರಡೂವರೆ ವರ್ಷ ಪೂರೈಸಿರುವ ನಿಗಮ ಮಂಡಳಿ ಅಧ್ಯಕ್ಷರ ರಾಜೀನಾಮೆ ಪಡೆಯಬೇಕು ಹಾಗೂ ಹೊಸಬರಿಗೆ ಅವಕಾಶ ನೀಡಬೇಕು" ಎಂದರು.
ಕೆಪಿಸಿಸಿ ಹಲವಾರು ಪದಾಧಿಕಾರಿಗಳು ಬಹಳ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಅವರಿಗೂ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಯಾರೂ ಕಾಂಗ್ರೆಸ್ ಪಕ್ಷವನ್ನ ಅಲುಗಾಡಿಸಲು ಸಾಧ್ಯವಿಲ್ಲ. ಅಧಿಕಾರ ಇರುತ್ತೆ ಹೊಗುತ್ತದೆ, ಆದರೆ ಪಕ್ಷ ಮಾತ್ರ ಮುಂದುವರೆಯುತ್ತದೆ ಎಂದರು.
ನಿರ್ಣಯ ಏನೇನು?
1- ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ವಿಪಕ್ಷ ನಾಯಕರಾಗಿದ್ದಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.2- ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಕೆ ಮಾಡಲಾಯಿತು. ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಉತ್ತಮ ಸರ್ಕಾರ ನೀಡಿದ್ದಾರೆ ಎಂದು ಉಲ್ಲೇಖಿಸಿ ಅವರಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು.
3- ನೂತನ ಸಿಎಂ ಡಿಕೆಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮಾಡಿದ್ದಕ್ಕೆ ಹೈಕಮಾಂಡ್ ಗೆ ಅಭಿನಂದನೆಯನ್ನು ಇದೇ ವೇಳೆ ಸಲ್ಲಿಕೆ ಮಾಡಲಾಯಿತು.
4- ಶ್ರೀರಾಮ ಚಂದ್ರ ಟ್ರಸ್ಟ್ ನಲ್ಲಿ ಕೋಟ್ಯಾಂತರ ಹಣ ದೇಣಿಗೆ ಪಡೆಯಲಾಗಿದೆ. ಟ್ರಸ್ಟ್ ಗೆ ಬಂದ ಕಾಣಿಕೆ ಲೂಟಿ ಮಾಡಲಾಗಿದೆ. ಕೋಟ್ಯಾಂತರ ಭಕ್ತರ ನಂಬಿಕೆಗೆ ಧಕ್ಕೆ ತರಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು. ಮತ್ತು ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಯಿತು.
5. ಮಳೆ ಕೊರತೆ, ಬರಗಾಲದಿಂದ ಜನಜಾನುವಾರಿಗೆ ಸಮಸ್ಯೆ ಆಗಿದೆ. ಈ ಪರಿಸ್ಥಿತಿ ಸಮರೋಪಾದಿಯಲ್ಲಿ ಪರಿಹರಿಸಲು ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ಇದಕ್ಕಾಗಿ 10 ಸಾವಿರ ಕೋಟಿ ಕೇಂದ್ರ ಸಹಾಯಧನ ನೀಡಬೇಕು ಎಂದು ಒತ್ತಾಯಿಸಲಾಯಿತು.
6. ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು. ಧರ್ಮೇಂದ್ರ ಪ್ರಧಾನ್ ವಜಾ ಮಾಡಬೇಕು ಎಂದು ಆಗ್ರಹಿಸಲಾಯಿತು.
7. ರಣದೀಪ್ ಸಿಂಗ್ ಸುರ್ಜೆವಾಲಾ ನಿರಂತರವಾಗಿ ಪಕ್ಷದ ಕೆಲಸ ಮಾಡಿದ್ದಾರೆ. ಸರ್ವ ಸದಸ್ಯರ ಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಕೆಗೆ ತೀರ್ಮಾನ ಮಾಡಲಾಯಿತು.
8. ಕೋಮುವಾದಿ ಶಕ್ತಿಗಳನ್ನು ಎದುರಿಸಲು ಕಾಂಗ್ರೆಸ್ ಸಿದ್ದಾಂತ ಆಳವಾಗಿ ತಿಳಿದುಕೊಳ್ಳಬೇಕು. ಅದಕ್ಕಾಗಿ ತರಬೇತಿ ನೀಡುವ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧಾರ ಮಾಡಲಾಯಿತು.

