Dailyhunt
ಬಸವಣ್ಣನವರ ತತ್ವಗಳು ಸರ್ವಕಾಲೀಕ

ಬಸವಣ್ಣನವರ ತತ್ವಗಳು ಸರ್ವಕಾಲೀಕ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲೀಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ ವತಿಯಿಂದ ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ವಿಶ್ವಗುರು ಬಸವೇಶ್ವರರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು, ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಜಗತ್ತಿನಲ್ಲಿ ಕ್ರಾಂತಿ ಆಗಿದೆ.
ಆದರೆ ಸರ್ವರ ಸಮಾನತೆಗಾಗಿ ಯಾವುದಾದರೂ ಕ್ರಾಂತಿ ನಡೆದಿದ್ದರೆ ಅದು ಕಲ್ಯಾಣದ ಕ್ರಾಂತಿ ಮಾತ್ರ ಎಂದು ಹೇಳಿದರು. 12ನೇ ಶತಮಾನದಲ್ಲಿ ಮನುಷ್ಯರನ್ನು ಮನುಷ್ಯರಂತೆ ಕಾಣುತ್ತಿರಲಿಲ್ಲ. ಮೌಢ್ಯತೆ, ಅನಕ್ಷರತೆ ಇದ್ದು ಹೆಣ್ಣಿಗೆ ಸಮಾನತೆ ಇರಲಿಲ್ಲ. ಅಂತಹ ಕಾಲಘಟ್ಟದಲ್ಲಿ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆಯ ತಳಹದಿಯ ಮೇಲೆ ಬಲಿಷ್ಠ ಸುಂದರ ಸಮಾಜದ ನಿರ್ಮಾಣಕ್ಕೆ ವಿಶ್ವಗುರು ಬಸವಣ್ಣ ನೇತೃತ್ವದಲ್ಲಿ ವೈಚಾರಿಕ ಮತ್ತು ವೈಜ್ಞಾನಿಕತೆಯ ತಳಹದಿಯ ಮೇಲೆ ಕ್ರಾಂತಿ ನಡೆಯಿತು. ಶ್ರೇಣಿರಹಿತ, ವರ್ಗರಹಿತ, ಲಿಂಗಭೇದ ರಹಿತ ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದರು ಎಂದರು.ಅನುಭವ ಮಂಟಪ ಸ್ಥಾಪನೆ:ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ಕಲ್ಪನೆಯನ್ನು ನೀಡಿ, ವಿಶ್ವದ ಪ್ರಥಮ ಸಂಸತ್ತು ಅನುಭವ ಮಂಟಪ ಸ್ಥಾಪಿಸಿದರು. ಅಲ್ಲಿ 770 ವಿವಿಧ ವೃತ್ತಿಯ, ವಿವಿಧ ಸಮುದಾಯದ ಅಮರಗಣಂಗಳು ಪಾಲ್ಗೊಳ್ಳುತ್ತಿದ್ದರು.
ಅವರೆಲ್ಲರೂ ವಚನಗಳನ್ನು ರಚಿಸಿದ್ದಾರೆ. ಪ್ರಜಾಪ್ರಭುತ್ವದ ಪರಿಕಲ್ಪನೆಗೆ ತಳಹದಿಯಾದ ಅನುಭವ ಮಂಟಪ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸಚಿವರು ತಿಳಿಸಿದರು. ಇತ್ತೀಚೆಗೆ ಆಧುನಿಕ ಅನುಭವ ಮಂಟಪ ಕಾಮಗಾರಿಗೆ 105 ಕೋಟಿ ಬಿಡುಗಡೆ ಮಾಡುವುದರೊಂದಿಗೆ ಈವರೆಗೆ 280 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ವರ್ಷದೊಳಗೆ ಇದರ ಲೋಕಾರ್ಪಣೆ ಮಾಡಲಾಗುವುದು ಎಂದರು. ಬಸವಣ್ಣನವರ ಚಿಂತನೆ ಮೈಗೂಡಿಸಿಕೊಂಡೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ ಬಸವಣ್ಣನವರ ಚಿಂತನೆಗಳನ್ನು ಚಿಕ್ಕ ವಯಸ್ಸಿನಲ್ಲೆ ಮನಗಂಡು ಮೈಗೂಡಿಸಿಕೊಂಡೆ ಎಂದರು. ಬುದ್ಧ, ಬಸವಣ್ಣ, ಗಾಂಧೀಜಿ, ಅಂಬೇಡ್ಕರ್ ಬಗ್ಗೆ ಹೆಚ್ಚಿನ ಪಾಠ ಕಲಿತು ಆ ದಾರಿಯಲ್ಲೆ ನಡೆಯುವಂತ ಕೆಲಸ ಮಾಡುತ್ತಿದ್ದೇನೆ ಎಂದರು. ಎಲ್ಲ ದೇವರುಗಳಿಗಿಂತ ಮೇಲು ದೇವರು ಬಸವಣ್ಣನವರು, 12 ನೇ ಶತಮಾನದಲ್ಲಿ ಅನುಭವ ಮಂಟಪ ನಿರ್ಮಿಸಿ ಸಮಾಜದ ಸುಧಾರಣೆ, ಮಾನವತವಾದವನ್ನು ಪ್ರತಿಪಾದಿಸಿದಂತಹ ಮಹಾನ್ ಚೇತನ ಬಸವಣ್ಣನವರು, ಅವರ ವಚನಗಳು, ಆದರ್ಶಗಳು, ಕಾಯಕ ನಿಷ್ಟೆ ಎಂದೆಂದಿಗೂ ಶಾಶ್ವತ ಎಂದು ಹೇಳಿದರು.ಕಾಯಕವೇ ಕೈಲಾಸ:ಬಸವಣ್ಣನವರು ಕಾಯಕವೇ ಕೈಲಾಸವೆಂದರು.
ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶವನ್ನು ನೀಡಿದ ಮಹಾನ್ ದಾರ್ಶನಿಕ ಬಸವಣ್ಣ ಅವರ ಆದರ್ಶಗಳು ನಮ್ಮ ಸಮಾಜಕ್ಕೆ ಸದಾ ದಾರಿದೀಪವಾಗಿವೆ ಎಂದು ಲೋಕಸಭಾ ಸದಸ್ಯ ಡಾ.ಕೆ ಸುಧಾಕರ್ ಹೇಳಿದರು. ವಚನಗಳನ್ನು ಬರೆಯುವುದರ ಜತೆಗೆ ವಚನದಲ್ಲಿರುವಂತೆ ಪಾಲಿಸಿದ್ದರು. ಬಸವಣ್ಣನವರ ಆದರ್ಶಗಳನ್ನು ಪಾಲಿಸಬೇಕು. ಪ್ರತಿದಿನದ ಮಾಡುವ ಕೆಲಸದಲ್ಲಿ ಬಸವಣ್ಣನವರನ್ನು ಕಾಣಬೇಕು. ಬಸವಣ್ಣ ಆಚರಣೆಗೆ ತಂದ ದಾಸೋಹವು ಈಗ ತ್ರಿವಿಧವಾದ ಶಿಕ್ಷಣ, ಆರೋಗ್ಯ, ಅನ್ನ ದಾಸೋಹಗಳಾಗಿ ರಾಜ್ಯದಲ್ಲಿ ಪ್ರಾಮುಖ್ಯತೆ ಪಡೆದಿದೆ ಎಂದರು.ಪ್ರತಿಮೆ ವಿಶೇಷತೆ: ಜಿಲ್ಲಾಡಳಿತ ಭವನ ಆವರಣದಲ್ಲಿ ಲೋಕಾರ್ಪಣೆಗೊಂಡ ಬಸವಣ್ಣ ಪ್ರತಿಮೆಯಲ್ಲಿ ಮಂಟಪ 28 ಅಡಿ. ಕಂಚಿನ ಪ್ರತಿಮೆ 5 ಅಡಿ ಉದ್ದವಾಗಿದ್ದು 450 ಕೆಜಿ ಕಂಚು ಬಳಕೆ ಮಾಡಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇನ್ನಷ್ಟು ಓದಿ
Dailyhunt
Disclaimer: This content has not been generated, created or edited by Dailyhunt. Publisher: Vijayvani