Dailyhunt Logo
  • Light mode
    Follow system
    Dark mode
    • Play Story
    • App Story
prasanna Edikeri

prasanna Edikeri

ನಾಪೋಕ್ಲು: ಕಾವೇರಿ ನದಿಯ ತವರು ಜಿಲ್ಲೆಯಾದ ಕೊಡಗಿನಲ್ಲಿ ಈ ಬಾರಿ ಮಳೆ ಕೊರತೆ ಉಂಟಾಗಿದೆ. ಹಾಗಾಗಿ ಮಡಿಕೇರಿ ಹಾಗೂ ಕುಶಾಲನಗರ ತಾಲೂಕುಗಳನ್ನು ತಕ್ಷಣವೇ ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಬಿಜೆಪಿ ಮುಖಂಡ ಪ್ರಸನ್ನ ಎಡಿಕೇರಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.35ರಷ್ಟು ಮಳೆ ಕೊರತೆಯಾಗಿದೆ. ಭಾಗಮಂಡಲ ಸೇರಿದಂತೆ ಮಡಿಕೇರಿ ತಾಲೂಕಿನ ವಿವಿಧ ಭಾಗಗಳಲ್ಲಿ ರೈತರು ಭತ್ತದ ಕೃಷಿ ಮಾಡಲು ಹರಸಾಹಸ ಪಡುವಂತಾಗಿದೆ. ಮಳೆ ಅಭಾವದಿಂದ ಕಾಫಿ, ಕಾಳುಮೆಣಸು ಹಾಗೂ ಇತರ ಪ್ರಮುಖ ಬೆಳೆಗಳು ಸಂಪೂರ್ಣ ನಾಶವಾಗಿವೆ. ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಈಗಾಗಲೇ ಮೂರು ಹಂತಗಳಲ್ಲಿ ಬರ ಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ವಿರಾಜಪೇಟೆ, ಪೊನ್ನಂಪೇಟೆ ತಾಲೂಕುಗಳನ್ನು ಸೇರಿಸಲಾಗಿದೆ. ಆದರೆ ಮಡಿಕೇರಿ ಮತ್ತು ಕುಶಾಲನಗರ ತಾಲೂಕುಗಳನ್ನು ಕೈಬಿಟ್ಟಿರುವುದು ವಿಷಾದನೀಯ ಎಂದಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ:

ಮಳೆ ಕೊರತೆಯಿಂದ ಜನ ಹಾಗೂ ಜಾನುವಾರುಗಳು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮಡಿಕೇರಿ ಮತ್ತು ಕುಶಾಲನಗರ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರಸನ್ನ ಎಚ್ಚರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vijayvani