ಗೌರಿಬಿದನೂರು: ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ತಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿರುವುದು ರಾಜಕೀಯವಾಗಿ ಮತ್ತಷ್ಟು ಬಲ ತುಂಬಿದೆ ಎಂದು ಶಾಸಕ ಕೆ.ಎಚ್. ಪುಟ್ಟ ಸ್ವಾಮಿಗೌಡ( MLA K H Puttaswamy Gowda ) ಹೇಳಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಮುಖಂಡರು, ಯುವ ನಾಯಕರು ಮತ್ತು ಕಾರ್ಯಕರ್ತರನ್ನು ಬಣಕ್ಕೆ ಬರಮಾಡಿ ಕೊಂಡ ಬಳಿಕ ಮಾತನಾಡಿದರು.
ಕಳೆದ ಮೂರೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಂದ ಪ್ರೇರಿತರಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಜನರು ತಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ತಿಳಿಸಿದರು. ಶಿಕ್ಷಣ ತಜ್ಞ ಡಾ. ಎಚ್. ನರಸಿಂಹಯ್ಯ ಜನ್ಮಭೂಮಿಯ ಅಭಿವೃದ್ಧಿಗೆ ಸರ್ಕಾರದಿಂದ ಬಹುಕೋಟಿ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
MLA K H Puttaswamy Gowda: ರಸ್ತೆ ಕಾಮಗಾರಿಯಲ್ಲಿ ಕಳಪೆಗೆ ಅವಕಾಶವಿಲ್ಲ: ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ
ಮುಖಂಡ ಕೃಷ್ಣಪ್ಪ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಗಳ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶಾಸಕರು ಯಶಸ್ವಿಯಾಗಿದ್ದು, ರಾಜಕೀಯ ವೈಷಮ್ಯಕ್ಕೆ ಅವಕಾಶ ನೀಡದೆ ಉತ್ತಮ ಆಡಳಿತ ನೀಡಿದ್ದಾರೆ. ಇದೇ ಕಾರಣದಿಂದ ನಾವು ಅವರ ಬಣಕ್ಕೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.
ಮುಖಂಡ ಅಬ್ದುಲ್ಲಾ ಮಾತನಾಡಿ, ಎಲ್ಲಾ ಸಮುದಾಯಗಳಿಗೆ ಸಮಾನ ಗೌರವ ನೀಡಿ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುತ್ತಿರುವುದರಿಂದ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಕೆಎಚ್‌ಪಿ ಬಣದತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಟಾಲದಿನ್ನೆ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ ಸೇರಿದಂತೆ ಮುಖಂಡರಾದ ಲಕ್ಷ್ಮೀಪತಿ, ಫೈರೋಜ್ ಖಾನ್, ನೂರುಲ್ಲಾಖಾನ್, ಗಂಗಾಧರಪ್ಪ, ಪಾಪಣ್ಣ, ಅಶ್ವತ್ತಪ್ಪ, ಹರೀಶ್ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ತೊರೆದು ಕೆಎಚ್‌ಪಿ ಬಣಕ್ಕೆ ಸೇರ್ಪಡೆಯಾದರು.

